ADVERTISEMENT

ಹೆಣ್ಣು ಇದ್ದರೆ ಮನೆಗೆ ಬೆಳಗು

ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 16:38 IST
Last Updated 20 ಅಕ್ಟೋಬರ್ 2020, 16:38 IST
ಮಂಗಳೂರಿನಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ದೀಪ ಬೆಳಗಿದರು.
ಮಂಗಳೂರಿನಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ದೀಪ ಬೆಳಗಿದರು.   

ಮಂಗಳೂರು: ಹೆಣ್ಣುಮಕ್ಕಳ ಸ್ನೇಹಿ ಶಾಲೆಗೆ ಪುರಸ್ಕಾರ, ಕಲಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಸನ್ಮಾನ, ಲಿಂಗಾನುಪಾತದಲ್ಲಿ ಸಮಾನತೆ ಇರುವ ಪಂಚಾಯಿತಿಗಳಿಗೆ ಗೌರವ, ಹೆಣ್ಣು ಮಗು ಹೆತ್ತವರಿಗೆ ಪ್ರೋತ್ಸಾಹಪತ್ರ ವಿತರಣೆಯೊಂದಿಗೆ ಮಂಗಳವಾರ ಇಲ್ಲಿ ಅಂತರರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸನ್ಮಾನ ಕಾರ್ಯಕ್ರಮ ನೆರವೇರಿಸಿದ ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ‘ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹೆಣ್ಣು ಮಗು ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎನ್ನುವುದು ಅಚ್ಚರಿಯ ಸಂಗತಿ. ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರ ಪಾತ್ರ ಮಹತ್ವದ್ದಾಗಿದೆ. ಎಲ್ಲಕ್ಕಿಂತ ಮನುಷ್ಯತ್ವ ಪ್ರಧಾನ ಎಂಬ ಕಲ್ಪನೆಯನ್ನು ಬಿತ್ತುವ ಜತೆಗೆ, ಗಂಡು ಮತ್ತು ಹೆಣ್ಣು ಮಕ್ಕಳ ನಡುವೆ ಭೇದ ತೋರದೆ ಬೆಳೆಸುವ ಮಾನಸಿಕತೆಯನ್ನು ಜನರಲ್ಲಿ ಮೂಡಿಸಬೇಕಾಗಿದೆ. ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಕೊಡುವ ಶಿಕ್ಷಣ ಪ್ರಜ್ಞೆಯನ್ನು ಗಂಡು ಮಕ್ಕಳಲ್ಲೂ ಬೆಳೆಸುವ ಹೊಣೆಗಾರಿಕೆ ಪಾಲಕರಲ್ಲಿ ಬರಬೇಕಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ ‘ಶೈಕ್ಷಣಿಕವಾಗಿ ಮುಂದುವರಿದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹೆಣ್ಣು–ಗಂಡು ಲಿಂಗಾನುಪಾತದಲ್ಲಿ ವ್ಯತ್ಯಾಸ ಇರುವುದು ಆಘಾತಕಾರಿಯಾಗಿದೆ. ಮನೆಯಲ್ಲಿ ಹೆಣ್ಣು ಮಕ್ಕಳು ಇರಬೇಕು. ಹೆಣ್ಣು ಇದ್ದರೆ ಮನೆ ಬೆಳಗುತ್ತದೆ’ ಎಂದರು.

ADVERTISEMENT

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್‌.ಸೆಲ್ವಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಡಾ. ರಾಜೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.