ಶೃಂಗೇರಿ: ಜಾನಪದ ಸಾಹಿತ್ಯ, ಸಂಗೀತ, ಕಲೆ ಮತ್ತು ಸಂಸ್ಕೃತಿ ಮುಂದಿನ ಪೀಳಿಗೆಗೆ ವರ್ಗಾವಣೆಯಾಗುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ನವೋದಯ ಶೈಕ್ಷಣಿಕ ಸಂಸ್ಥೆಯ ಅಧ್ಯಕ್ಷ ಎಚ್.ಎಲ್. ತ್ಯಾಗರಾಜ ರಾವ್ ಹೇಳಿದರು.
ಕರ್ನಾಟಕ ಜಾನಪದ ಪರಿಷತ್ತು ಶೃಂಗೇರಿ ಘಟಕ ಮತ್ತು ಚಿಕ್ಕಮಗಳೂರು ಜಿಲ್ಲಾ ಘಟಕ ಇಲ್ಲಿ ಆಯೋಜಿಸಿದ್ದ ಶೃಂಗಗಿರಿ ಜಾನಪದ ಉತ್ಸವ ಮತ್ತು ಕರ್ನಾಟಕ ಜಾನಪದ ಪರಿಷತ್ತು ಮಹಿಳಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಾನಪದ ಸಾಹಿತ್ಯ ಮತ್ತು ಸಂಗೀತಕ್ಕೆ ಮಾನವನನ್ನು ಉತ್ತಮ ನಾಗರಿಕನನ್ನಾಗಿ ರೂಪಿಸುವ ಶಕ್ತಿ ಇದೆ. ಸಮಾಜದ ಅಂಕುಡೊಂಕು ತಿದ್ದುವ ಶಕ್ತಿ ಜಾನಪದಕ್ಕಿದೆ ಎಂದರು.
ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ ಸುರೇಶ್ ಮಾತನಾಡಿ, ಸ್ವಸ್ಥ ಸಮಾಜ ನಿರ್ಮಾಣವ ಮಾಡುವ ಶಕ್ತಿ ಜಾನಪದಕ್ಕಿದೆ. ಶಿಷ್ಟ ಸಾಹಿತ್ಯ, ದಾಸ ಸಾಹಿತ್ಯ, ವಚನ ಸಾಹಿತ್ಯ, ದಲಿತ ಸಾಹಿತ್ಯ ಮತ್ತು ಬಂಡಾಯ ಸಾಹಿತ್ಯಗಳ ಮೂಲ ಬೇರು ಜಾನಪದವೇ ಆಗಿದೆ. ಭಾರತೀಯ ಸಂಸ್ಕೃತಿ, ಆಚಾರ ವಿಚಾರ, ಉಡುಗೆ, ತೊಡುಗೆ, ಕೃಷಿ, ಜೀವನ ಶೈಲಿ, ಸಾಮಾಜಿಕ ಮತ್ತು ಆರ್ಥಿಕ, ವೈಜ್ಞಾನಿಕ ನೆಲೆಗಟ್ಟಿನ ಮೂಲಬೇರು ಜಾನಪದವೇ ಆಗಿದೆ ಎಂದರು.
ಕರ್ನಾಟಕ ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಅಂಗುರ್ಡಿ ದಿನೇಶ್ ಮಾತನಾಡಿ, ಶಾಲಾ ಕಾಲೇಜುಗಳಲ್ಲಿ, ಸಾರ್ವಜನಿಕ ವೇದಿಕೆಗಳಲ್ಲಿ ಜಾನಪದ ಕಲೆ, ಸಾಹಿತ್ಯ, ಸಂಗೀತಕ್ಕೆ ಹೆಚ್ಚು ಒತ್ತನ್ನು ನೀಡಬೇಕು ಎಂದರು.
ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ರೇಣುಕಾ ರಾಮಪ್ಪ ಅವರನ್ನು ಆಯ್ಕೆ ಮಾಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪದ್ಮಾವಸಂತಮ್ಮ, ಪುಷ್ಪ ಪ್ರಕಾಶ್, ಸುರೇಶ್ ಸಂಕುರವರನ್ನು ಸನ್ಮಾನಿಸಲಾಯಿತು.
ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಶಿವಶಂಕರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ವೇಣುಗೋಪಾಲ್, ಟಿ.ಎ.ಪಿ.ಸಿ.ಎಂ.ಎಸ್.ನ ಅಧ್ಯಕ್ಷ ಕೆ.ಎಸ್ ರಮೇಶ್, ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಪೂಜಾರಿ, ಪ್ರಕಾಶ್ ಕೆ.ಆರ್, ಶಂಕರ್ ಬಿ. ಯೋಗಪ್ಪ, ವಿಶ್ವನಾಥ್, ಪ್ರಸನ್ನ ಭಟ್, ಸುನೀತಾ ನವೀನ ಗೌಡ, ಶೂನ್ಯ ರಮೇಶ, ಆನಂದ ಸ್ವಾಮಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.