ಮಂಗಳೂರು: ನಗರದ ಹೊರವಲಯದ ಮೂಡುಶೆಡ್ಡೆ ಗ್ರಾಮದಲ್ಲಿರುವ ಕ್ಷಯ ರೋಗ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿದ ಜಾಗದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಗಳ ಘಟಕವನ್ನು ಆರಂಭಿಸಲು ಇಲಾಖೆ ಪ್ರಸ್ತಾವ ಸಿದ್ದಪಡಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಈ ಕುರಿತು ಪತ್ರ ಬರೆದಿದ್ದಾರೆ.
‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಸಾಂಕ್ರಾಮಿಕ ರೋಗಗಳಾದ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ರೋಗಗಳ ಸಂಖ್ಯೆ ಇತ್ತೀಚೆಗೆ ಹೆಚ್ಚುತ್ತಿದೆ. ನಾನು ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭಗಳಲ್ಲಿ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ರೋಗಿಗಳ ಚಿಕಿತ್ಸೆಗಾಗಿ ಪ್ರತ್ಯೇಕವಾಗಿ ಸರ್ಕಾರಿ ಆಸ್ಪತ್ರೆಗಳನ್ನು ಪ್ರಾರಂಭಿಸಲು ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಕೋರಿದ್ದಾರೆ. ಮಂಗಳೂರು ನಗರದ ಹೊರ ವಲಯದ ಮೂಡುಶೆಡ್ಡೆ ಗ್ರಾಮದಲ್ಲಿರುವ ಕ್ಷಯರೋಗಗಳ ಆಸ್ಪತ್ರೆಯ ಆವರಣದಲ್ಲಿ ಲಭ್ಯವಿರುವ ಜಾಗದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಗಳ ಒಂದೊಂದು ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲೆಯ ಜನರ ಮತ್ತು ಜನಪ್ರತಿನಿಧಿಗಳ ಪರವಾಗಿ ತಮ್ಮನ್ನು ಕೋರುತ್ತೇನೆ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
8 ಎಕರೆ ಲಭ್ಯ: ವಾಮಂಜೂರಿನ ಸಮೀಪದ ಮೂಡುಶೆಡ್ಡೆಯಲ್ಲಿರುವ ಕ್ಷಯರೋಗ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆಗೆ ಸೇರಿದ ಸುಮಾರು 8 ಎಕರೆ ಜಾಗ ಲಭ್ಯವಿದೆ. ಅಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಗಳ ಘಟಕಗಳನ್ನು ಆರಂಭಿಸಲು ಸಾಕಷ್ಟು ಸ್ಥಳಾವಕಾಶವಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಮ್ಮಯ್ಯ ಎಚ್.ಆರ್. ಅವರು ‘ಪ್ರಜಾವಾಣಿ‘ಗೆ ತಿಳಿಸಿದರು.
ಮೂಡುಶೆಡ್ಡೆ ಪ‍್ರದೇಶವು ನಗರಕ್ಕೆ ಸಮೀಪದಲ್ಲೇ ಇದೆ. ನಗರದ ಒಳಗೆ ಎಲ್ಲೂ ಆರೋಗ್ಯ ಇಲಾಖೆ ಬಳಿ ಅಷ್ಟೊಂದು ವಿಶಾಲ ಜಾಗ ಲಭ್ಯ ಇಲ್ಲ. ಮೂಡುಶೆಡ್ಡೆಗೆ ರಸ್ತೆ ಸಂಪರ್ಕ ಹಾಗೂ ಸಾರಿಗೆ ವ್ಯವಸ್ಥೆಯೂ ಚೆನ್ನಾಗಿದೆ. ಹಾಗಾಗಿ ಅಲ್ಲಿ ಲಭ್ಯ ಇರುವ ಜಾಗದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಗಳ ಘಟಕ ಸ್ಥಾಪಿಸುವುದು ಸೂಕ್ತ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲೂ ಸಲಹೆ ವ್ಯಕ್ತವಾಗಿತ್ತು.