ADVERTISEMENT

ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

‘ಉದ್ಯೋಗ ಸೃಷ್ಟಿಗೆ ಆದ್ಯತೆ, ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ ಪ್ರಯತ್ನ’

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2023, 13:51 IST
Last Updated 17 ಏಪ್ರಿಲ್ 2023, 13:51 IST
ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸೋಮವಾರ ಪಕ್ಷದ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಬಂದು ಬಳಿಕ ನಾಮಪತ್ರ ಸಲ್ಲಿಸಿದರು
ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸೋಮವಾರ ಪಕ್ಷದ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಬಂದು ಬಳಿಕ ನಾಮಪತ್ರ ಸಲ್ಲಿಸಿದರು   

ಮೂಡುಬಿದಿರೆ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪಕ್ಷದ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಬಂದು ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

‌ಸ್ವರಾಜ್ಯ ಮೈದಾನದಲ್ಲಿ ಮಹಮ್ಮಾಯಿ ದೇವರ ದರ್ಶನ ಪಡೆದ ಅವರು ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪಿನಲ್ಲಿ ಸಾಗಿ ಬಂದರು. ಬಳಿಕ ಚುನಾವಣೆ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಇದಕ್ಕೂ ಮೊದಲು ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷಕ್ಕೆ ನಿರುದ್ಯೋಗ ಸಮಸ್ಯೆಯೇ ಪ್ರಮುಖ ಕಾರಣ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಚುನಾಯಿಸಿದಲ್ಲಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಖಾಸಗಿ ಆಸ್ಪತ್ರೆಗೆ ಸಮಾನವಾದ ಚಿಕಿತ್ಸಾ ಸೌಲಭ್ಯ ಒದಗಿಸುವ ಸಂಕಲ್ಪ ತೊಟ್ಟಿದ್ದೇನೆ’ ಎಂದರು.

ADVERTISEMENT

‘ಈ ಬಾರಿಯ ಚುನಾವಣೆಯಲ್ಲಿ ನನ್ನ ರಾಜಕೀಯ ಗುರು ಅಭಯಚಂದ್ರ ಜೈನ್‌ ಅವರು ಕೃಷ್ಣನ ಪಾತ್ರ ನಿರ್ವಹಿಸಿದ್ದರೆ, ನಾನು ಅರ್ಜುನನ ಪಾತ್ರ ನಿರ್ವಸುತ್ತೇನೆ. ನಮ್ಮೊಳಗೆ ವೈಮನಸ್ಸು ಉಂಟಾಗಿದೆ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇಂತಹ ಯಾವುದೇ ಘಟನೆ ನಡೆದಿಲ್ಲ, ಮುಂದೆಯೂ ಆಗುವುದಿಲ್ಲ. ಕ್ಷೇತ್ರಕ್ಕೆ ಅಭಯಚಂದ್ರರ ಕೊಡುಗೆಯನ್ನು ಯಾರೂ ಮರೆಯುವಂತಿಲ್ಲ. ಮೂಡುಬಿದಿರೆ- ಮೂಲ್ಕಿಯನ್ನು ಮಾದರಿಯನ್ನಾಗಿಸುವ ಸಂಕಲ್ಪ ಮಾಡಿದ್ದೇನೆ, ಜನತೆ ಆಶೀರ್ವದಿಸಬೇಕು’ ಎಂದು ಮನವಿ ಮಾಡಿದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಯು.ಟಿ ಖಾದರ್, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್, ದೇವಿಪ್ರಸಾದ್ ಶೆಟ್ಟಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ಮಮತಾ ಗಟ್ಟಿ, ಶಾಲೆಟ್ ಪಿಂಟೊ, ಸುಪ್ರಿಯಾ ಡಿ. ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.