ADVERTISEMENT

Karnataka Elections: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಎಸ್‌ಡಿಪಿಐ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2023, 14:11 IST
Last Updated 13 ಫೆಬ್ರುವರಿ 2023, 14:11 IST
ಶಾಫಿ ಬೆಳ್ಳಾರೆ
ಶಾಫಿ ಬೆಳ್ಳಾರೆ   

ಪುತ್ತೂರು (ದಕ್ಷಿಣ ಕನ್ನಡ): ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಾಫಿ ಬೆಳ್ಳಾರೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಎಸ್‌ಡಿಪಿಐ ನಿರ್ಧರಿಸಿದೆ.

ಪುತ್ತೂರಿನಲ್ಲಿ ಫೆ.10ರಂದು ಎಸ್‌ಡಿಪಿಐ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಸಮ್ಮುಖದಲ್ಲಿ ನಡೆದ ಪಕ್ಷದ ಪುತ್ತೂರು ಕ್ಷೇತ್ರ ಸಮಿತಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

‘ಶಾಫಿ ಬೆಳ್ಳಾರೆ ಅವರು ಎಸ್‌ಡಿಪಿಐ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದಾರೆ. ಅವರೇ ಪುತ್ತೂರು ಕ್ಷೇತ್ರದ ಅಭ್ಯರ್ಥಿಯಾಗಲಿ ಎಂದು ಆರು ತಿಂಗಳ ಹಿಂದೆಯೇ ಕ್ಷೇತ್ರ ಸಮಿತಿ ನಿರ್ಧಾರ ಕೈಗೊಂಡಿತ್ತು. ಆ ಬಳಿಕ ಅವರನ್ನು, ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಬಂಧಿಸಲಾಯಿತು. ಹಿಂದಿನ ತೀರ್ಮಾನದಂತೆ ಅವರನ್ನೇ ಅಭ್ಯರ್ಥಿಯಾಗಿಸಲು ನಿರ್ಧರಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಅಧಿಕೃತವಾಗಿ ಘೋಷಿಸಲಿದ್ದಾರೆ‘ ಎಂದು ಪಕ್ಷದ ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಾಗರ್‌ ತಿಳಿಸಿದ್ದಾರೆ.

ADVERTISEMENT

‘ಶಾಫಿ ವಿರುದ್ಧ ಆರೋಪ ದೃಢಪಟ್ಟಿಲ್ಲ. ವಿಚಾರಣಾಧೀನ ಕೈದಿ ಜೈಲಿನಿಂದಲೂ ಉಮೇದುವಾರಿಕೆ ಸಲ್ಲಿಸಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇದೆ. ಒಂದೊಮ್ಮೆ ಶಾಫಿ ಬೆಳ್ಳಾರೆ ಸ್ಪರ್ಧೆಗೆ ಕಾನೂನು ತೊಡಕು ಎದುರಾದಲ್ಲಿ ಕ್ಷೇತ್ರ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಸಾಗರ್ ಅವರನ್ನು ಸ್ಪರ್ಧೆಗಿಳಿಸುವ ನಿರ್ಧಾರವಾಗಿದೆ’ ಎಂಬುದು ಪಕ್ಷದ ಮೂಲಗಳ ಮಾಹಿತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.