ADVERTISEMENT

ಸಂಸದ ನಳಿನ್‌ ಕುಮಾರ್ ಕಟೀಲ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2019, 19:47 IST
Last Updated 19 ಆಗಸ್ಟ್ 2019, 19:47 IST
.
.   

ಬೆಂಗಳೂರು: ‘ಕಾರ್ತಿಕ ರಾಜ ಎಂಬುವರ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದರೆ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುಲಾಗುವುದು’ ಎಂಬ ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಅಧೀನ ನ್ಯಾಯಾಲಯದಲ್ಲಿನ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

‘ಪ್ರಕರಣಕ್ಕೆ ಸಂಬಂದಿಸಿದಂತೆ ಕೊಣಾಜೆ ಠಾಣೆ ಪೊಲೀಸರು ನನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಮತ್ತು ದೋಷಾರೋಪ ಪಟ್ಟಿ ರದ್ದುಪಡಿಸಬೇಕು’ ಎಂದು ಕೋರಿ ನಳಿನ್ ಕುಮಾರ್ ಕಟೀಲ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಂ.ಅರುಣ್ ಶ್ಯಾಮ್, ‘ರಾಜಕೀಯ ಕಾರಣಗಳಿಗಾಗಿ ಇಂತಹ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಅರ್ಜಿದಾರರ ವಿರುದ್ಧದ ಆರೋಪ ಸಾಬೀತುಪಡಿಸುವಂತಹ ಯಾವುದೇ ಸಾಕ್ಷ್ಯಾಧಾರಗಳನ್ನು ಪೊಲೀಸರು ಒದಗಿಸಿಲ್ಲ. ಆದ್ದರಿಂದ ಎಫ್‌ಐಆರ್ ಹಾಗೂ ದೋಷಾರೋಪ ಪಟ್ಟಿ ರದ್ದುಪಡಿಸಬೇಕು’ ಎಂದು ಕೋರಿದರು.

ADVERTISEMENT

ಪ್ರಕರಣವೇನು?: ಕಾರ್ತಿಕ ರಾಜ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದ ಹಂತದಲ್ಲಿ 2017ರ ಜನವರಿ 1ರಂದು ಕೊಣಾಜೆ ಪೊಲೀಸ್ ಠಾಣೆಗೆ ಹೋಗಿದ್ದ ನಳಿನ್‌ ಕುಮಾರ್ ಕಟೀಲ್‌, ‘ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ತಪ್ಪಿದರೆ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಿಸಬೇಕಾಗುತ್ತದೆ’ ಎಂಬ ಬೆದರಿಕೆ ಒಡ್ಡಿದ್ದರು ಎಂಬುದು ಆರೋಪ.

ಈ ಕುರಿತು ಸಂತೋಷ್ ಕುಮಾರ್ ಶೆಟ್ಟಿ ಜನವರಿ 2ರಂದು ಕೊಣಾಜೆ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ನಳಿನ್ ಕುಮಾರ್ ಎಫ್‌ಐಆರ್ ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.