ADVERTISEMENT

ಕುಕ್ಕೆ ದೇವಳಕ್ಕೂ ಪ್ರಾಧಿಕಾರ ರಚನೆಗೆ ಚಿಂತನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2019, 13:50 IST
Last Updated 16 ಸೆಪ್ಟೆಂಬರ್ 2019, 13:50 IST
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ   

ಮಂಗಳೂರು: ಮಲೆ ಮಹದೇಶ್ವರ ಪ್ರಾಧಿಕಾರದ ಮಾದರಿಯಲ್ಲೇ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಸ್ವತಂತ್ರ ಪ್ರಾಧಿಕಾರವೊಂದನ್ನು ರಚಿಸುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ‘ಕುಕ್ಕೆ ಸುಬ್ರಹ್ಮಣ್ಯ ಕರ್ನಾಟಕದ ಶ್ರೀಮಂತ ದೇವಸ್ಥಾನಗಳಲ್ಲಿ ಒಂದು. ಮಲೆ ಮಹದೇಶ್ವರ ಪ್ರಾಧಿಕಾರದ ಮಾದರಿಯಲ್ಲಿ ಇಲ್ಲಿಗೂ ಒಂದು ಪ್ರಾಧಿಕಾರ ರಚಿಸಿದರೆ ಹೆಚ್ಚು ಅನುಕೂಲ ಆಗುತ್ತದೆ. ಮುಖ್ಯಮಂತ್ರಿಯವರೇ ಪ್ರಾಧಿಕಾರದ ಅಧ್ಯಕ್ಷರಾಗಿರುವುದರಿಂದ ಅಭಿವೃದ್ಧಿಗೆ ಹೆಚ್ಚು ಅನುದಾನ ದೊರೆಯುತ್ತದೆ. ದೇವಸ್ಥಾನದ ಆದಾಯವನ್ನೂ ವ್ಯವಸ್ಥಿತವಾಗಿ ಬಳಸಲು ಸಾಧ್ಯವಾಗುತ್ತದೆ’ ಎಂದರು.

ಆಗ ಪ್ರತಿಕ್ರಿಯಿಸಿದ ಸಚಿವರು, ‘ಕುಕ್ಕೆ ದೇವಳಕ್ಕೂ ಪ್ರಾಧಿಕಾರ ರಚಿಸುವ ಕುರಿತು ಇಲಾಖೆಯಲ್ಲಿ ಚರ್ಚೆ ಆರಂಭವಾಗಿದೆ. ಶೀಘ್ರದಲ್ಲಿಯೇ ಈ ಬಗ್ಗೆ ನಿರ್ಧಾರಕ್ಕೆ ಬರಲಾಗುವುದು’ ಎಂದರು.

ADVERTISEMENT

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳ ಆಸ್ತಿಗಳ ರಕ್ಷಣೆಗೆ ಕ್ರಮ ಜರುಗಿಸಬೇಕು. ಒತ್ತುವರಿಯಾಗಿರುವ ದೇವಾಲಯಗಳ ಜಮೀನುಗಳನ್ನು ಗುರುತಿಸಿ, ತೆರವು ಮಾಡಬೇಕು. ಈ ಸಂಬಂಧ ವರದಿಯೊಂದನ್ನು ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದೇವಸ್ಥಾನಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ಬಿಗಿಯಾದ ನಿಯಮಗಳನ್ನು ಜಾರಿಗೊಳಿಸಬೇಕು. ಪ್ಲಾಸ್ಟಿಕ್‌ ಬಳಕೆ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಆದೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.