ADVERTISEMENT

ಸಾಕ್ಷಿ‌ ಹೇಳಲು ಸುಳ್ಯ‌ ನ್ಯಾಯಾಲಯಕ್ಕೆ ಹಾಜರಾದ ಡಿ.ಕೆ. ಶಿವಕುಮಾರ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 6:35 IST
Last Updated 5 ಅಕ್ಟೋಬರ್ 2021, 6:35 IST
ಡಿ.ಕೆ. ಶಿವಕುಮಾರ
ಡಿ.ಕೆ. ಶಿವಕುಮಾರ   

ಮಂಗಳೂರು: ಪ್ರಕರಣದ ವಿಚಾರಣೆಯಲ್ಲಿ ಸಾಕ್ಷಿ‌ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮಂಗಳವಾರ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಳಿಗ್ಗೆ ಬಂದಿಳಿದ ಡಿ.ಕೆ. ಶಿವಕುಮಾರ್ ಅವರನ್ನು ಮುಖಂಡರು ಹಾಗೂ ಕಾರ್ಯಕರ್ತರು ಬರಮಾಡಿಕೊಂಡರು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್‌ಕುಮಾರ್, ಮಾಜಿ ಶಾಸಕ ಲೋಬೊ, ಮಾಜಿ ಎಂಎಲ್ಸಿ ಐವನ್ ಡಿಸೋಜ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್ ಇದ್ದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾನು ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿ ಯಾವುದೋ ವ್ಯಕ್ತಿ ಕರೆ ಮಾಡಿ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ನಂತರ ಅಧಿಕಾರಿಗಳು ದೂರು ದಾಖಲಿಸಿದ್ದರು. ನಂತರ ಆತ ಆ ಅಧಿಕಾರಿಗಳಿಗೂ ನಿಂದನೆ ಮಾಡಿದ್ದ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಬರಬೇಕು ಎಂದು ನ್ಯಾಯಾಲಯ ಸೂಚಿಸಿದೆ. ಮೊದಲ ಬಾರಿಗೆ ನನಗೆ ತಿಳಿದಿರಲಿಲ್ಲ. ಹೀಗಾಗಿ ನ್ಯಾಯಾಲಯಕ್ಕೆ ತಲೆಬಾಗಿ ಈಗ ಬಂದಿದ್ದೇನೆ' ಎಂದರು.

ADVERTISEMENT

ಭಾರತೀಯ ಸಂಸ್ಕೃತಿಗೆ ಮಾಡಿದ ಅಪಮಾನ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ, ಪ್ರತಿಭಟನೆ ನಮ್ಮ ಹಕ್ಕು. ಅಹಿಂಸೆ ಮಾರ್ಗದಲ್ಲಿ ಹೋರಾಟ ಮಾಡುವುದು ಗಾಂಧೀಜಿ ಅವರು ನಮಗೆ ಹೇಳಿಕೊಟ್ಟ ಪಾಠ. ರೈತರು ಕಳೆದ 10 ತಿಂಗಳಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಮಂತ್ರಿಗಳಾಗಲಿ, ಮಂತ್ರಿಗಳಾಗಲಿ ಯಾರೂ ರೈತರನ್ನು ಭೇಟಿ ಮಾಡಿ ಮಾತನಾಡಿಲ್ಲ ಎಂದು ಹೇಳಿದರು.

ಕೇಂದ್ರ ಸಚಿವರ ಮಗ ಪ್ರತಿಭಟನನಿರತ ರೈತರ ಮೇಲೆ ಕಾರು ಹರಿಸಿ 4 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಜನ ದಾಳಿ ಮಾಡಿದ್ದಾರೆ. ಇದು ಕೂಡ ನಡೆಯಬಾರದ ಘಟನೆ. ಆದರೆ ಇದಕ್ಕೆ ಕಾರಣರಾದವರನ್ನು ಬಂಧಿಸಿಲ್ಲ, ಮಂತ್ರಿ ರಾಜೀನಾಮೆ ನೀಡಿಲ್ಲ, ಇದು ಒಂದು ಸರ್ಕಾರನಾ ಎಂದು ಪ್ರಶ್ನಿಸಿದರು.

ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಮುಂದಾಗಿದ್ದ ನಮ್ಮ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಸಾಂತ್ವನ ಹೇಳುವುದು ರಾಜಕೀಯ ಕರ್ತವ್ಯ. ಅದನ್ನು ಮಾಡಲು ಹೋದರೆ ಪುರುಷ ಪೊಲೀಸ್ ಅಧಿಕಾರಿಗಳು ಎಳೆದಾಡಿ ಅವರ ಹಕ್ಕನ್ನು ಕಸಿದಿದ್ದಾರೆ. ಇದು ಇಡೀ ಭಾರತೀಯ ಸಂಸ್ಕೃತಿಗೆ ಮಾಡಿದ ಅಪಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.