ADVERTISEMENT

ಮಂಗಳೂರು: ತಳಮಟ್ಟದಿಂದ ಪಕ್ಷ ಸಂಘಟಿಸಿ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಕಾರಿಣಿ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2020, 7:49 IST
Last Updated 13 ಸೆಪ್ಟೆಂಬರ್ 2020, 7:49 IST
ಮಂಗಳೂರಿನಲ್ಲಿ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಮಾತನಾಡಿದರು
ಮಂಗಳೂರಿನಲ್ಲಿ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಮಾತನಾಡಿದರು   

ಮಂಗಳೂರು: ಪಕ್ಷವನ್ನು ತಳಮಟ್ಟ ದಿಂದ ಸಂಘಟಿಸಲು ಮುಖಂಡರು ಪ್ರವಾಸ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

ನಗರದ ಮಲ್ಲಿಕಟ್ಟೆಯಲ್ಲಿನ ಕಾಂಗ್ರೆಸ್‌ ಭವನದಲ್ಲಿ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

‘ಎಲ್ಲ ನಾಯಕರು ಎಲ್ಲ ಬ್ಲಾಕ್‌ಗಳ ಸಭೆಗಳಲ್ಲಿ ಭಾಗವಹಿಸಿ ಸಲಹೆ, ಸೂಚನೆ ನೀಡಬೇಕು. ಬಿಜೆಪಿ ವೈಫಲ್ಯ ಹಾಗೂ ಕಾಂಗ್ರೆಸ್‌ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡಬೇಕು’ ಎಂದು ಅವರು ಕರೆ ನೀಡಿದರು.

ADVERTISEMENT

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಶಾಸಕ ಯು.ಟಿ. ಖಾದರ್, ಮಾಜಿ ಸಚಿವ ರಮಾನಾಥ ರೈ, ಗಂಗಾಧರ ಗೌಡ,ಮಾಜಿ ಶಾಸಕರಾದ ಜೆ.ಆರ್.ಲೋಬೊ, ಐವನ್ ಡಿಸೋಜ, ಮುಖಂಡರಾದಮಂಜುನಾಥ ಭಂಡಾರಿ, ಇಬ್ರಾಹಿಂ ಕೋಡಿಜಾಲ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮತ್ತಿತರರು ಇದ್ದರು.

‘ಕಾಂಗ್ರೆಸ್‌ನಿಂದ ಮಾತ್ರ ಸಂವಿಧಾನ ರಕ್ಷಣೆ’

ಪುತ್ತೂರು: ‘ನಿರಂತರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ಮೇಲೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಂವಿಧಾನದ ರಕ್ಷಣೆ ಸಾಧ್ಯವಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಕೊರೊನಾದಂತಹ ಸಾಂಕ್ರಾಮಿಕ ಕಾಯಿಲೆಯ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದೇವೆ. ಆದರೆ, ಸರ್ಕಾರ ಮಾತ್ರ ಕೊರೊನಾ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದೆ. ವೆಂಟಿಲೇಟರ್, ಮಾಸ್ಕ್ ಇನ್ನಿತರ ವಸ್ತುಗಳ ಖರೀದಿಯಲ್ಲಿ ₹ 2ಸಾವಿರ ಕೋಟಿಗೂ ಅಧಿಕ ಭ್ರಷ್ಟಾಚಾರ ನಡೆಸಿದೆ. ಕೇಂದ್ರ ಸರ್ಕಾರ ಕೊರೊನಾ ಸಂದರ್ಭದಲ್ಲಿ ಘೋಷಣೆ ಮಾಡಿದ ₹ 20 ಲಕ್ಷ ಕೋಟಿ ಅನುದಾನದಲ್ಲಿ
ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂಬ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಿಲ್ಲ’ ಎಂದು ಆರೋಪಿಸಿದರು.

ಕೊರೊನಾ ವಾರಿಯರ್ಸ್‌ಗಳನ್ನು ಸಲೀಂ ಅಹ್ಮದ್ ಗೌರವಿಸಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್,ವಿಧಾನಸಭಾ ಮುಖ್ಯ ಸಚೇತಕ ನಾರಾಯಣ ಸ್ವಾಮಿ, ಕೆಪಿಸಿಸಿ ಸಂಯೋಜಕ ಟಿ.ಪಿ.ರಮೇಶ್, ಕೆಪಿಸಿಸಿ ಕಾರ್ಯದರ್ಶಿ ಪಿ.ಯು. ಮೋಹನ್, ಕೆಪಿಸಿಸಿ ಸದಸ್ಯರಾದ ಎಂ.ಎಸ್. ಮಹಮ್ಮದ್, ಎಂ.ಬಿ.ವಿಶ್ವನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ, ಪಕ್ಷದ ಮುಖಂಡರಾದ ಟಿ.ಎಂ. ಶಹೀದ್, ವೆಂಕಪ್ಪ ಗೌಡ, ಭರತ್ ಮುಂಡೋಡಿ, ನಝೀರ್ ಮಠ, ಯುವ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಯು.ಟಿ. ತೌಸೀಫ್ ಇದ್ದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಸ್ವಾಗತಿಸಿದರು. ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.