ADVERTISEMENT

ಜ್ಞಾನ ದೀವಿಗೆಯ ಆಗರ ವಿದ್ಯೆ: ಚಂದ್ರಿಕಾ

ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಪ್ರತಿಭಾ ಕಾರಂಜಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 5:05 IST
Last Updated 2 ಡಿಸೆಂಬರ್ 2022, 5:05 IST
ಕುಂದಾಪುರ ಸಮೀಪದ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯನ್ನು ಚಂದ್ರಿಕಾ ಧನ್ಯ ಉದ್ಘಾಟಿಸಿದರು
ಕುಂದಾಪುರ ಸಮೀಪದ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯನ್ನು ಚಂದ್ರಿಕಾ ಧನ್ಯ ಉದ್ಘಾಟಿಸಿದರು   

ಕುಂದಾಪುರ: ವಿದ್ಯೆ ಕೇವಲ ಅಕ್ಷರ ಅಥವಾ ವಿಷಯಗಳ ಸಂಗ್ರಹವಾಗದೆ, ವ್ಯಕಿತ್ವವನ್ನು ಅರಳಿಸಿ, ವ್ಯಕ್ತಿಯ ಒಳಗಿರುವ ಪ್ರತಿಭೆಯನ್ನು ಹೊರ ತರುವ ಜ್ಞಾನ ದೀವಿಗೆ ಆಗಬೇಕು ಎಂದು ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಚಂದ್ರಿಕಾ ಧನ್ಯ ಹೇಳಿದರು.

ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಪಂಚಾಯಿತಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಭಾ ಕಾರಂಜಿಯ ಮೂಲಕ ಮಕ್ಕಳಲ್ಲಿ ಸಂಸ್ಕಾರದ ಅರಿವು ಮೂಡುತ್ತದೆ. ಸ್ಪರ್ಧೆ ಕೇವಲ ಪ್ರಶಸ್ತಿಗೆ ಸೀಮಿತವಾಗಬಾರದು. ನಿರಂತರ ಕಲಿಕೆಯಿಂದ ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದು ಅವರು ಹೇಳಿದರು.

ADVERTISEMENT

ಕೋಟೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣ ಗೊಲ್ಲ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಸುರೇಂದ್ರ ಶೆಟ್ಟಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ಪ್ರತಿಭಾ ಕಾರಂಜಿ ಜಿಲ್ಲಾ ನೋಡೆಲ್ ಅಧಿಕಾರಿ ಚಂದ್ರ ನಾಯ್ಕ್, ಶಿಕ್ಷಣ ತರಬೇತಿ ಕಾಲೇಜಿನ ಉಪನ್ಯಾಸಕ ಪ್ರಭಾಕರ್ ಮಿತ್ಯಾಂತ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಕುಂದಾಪುರ ತಾಲ್ಲೂಕು ಅಧ್ಯಕ್ಷ ಗಣೇಶ್ ಶೆಟ್ಟಿ ಮೊಳಹಳ್ಳಿ, ಉಡುಪಿ ವಲಯ ಶಿಕ್ಷಣಾಧಿಕಾರಿ ಜಾಹ್ನವಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಭಾರ ಪ್ರಾಂಶುಪಾಲೆ ಸುಶೀಲಾ, ಉಪ ಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಯೋಗಿ ನಾಯ್ಕ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿಶ್ವನಾಥ್ ಮತ್ತಿತರರು ಇದ್ದರು.

ಆಕರ್ಷಕ ಮೆರವಣಿಗೆ: ಸಭಾ ಕಾರ್ಯಕ್ರಮದ ಮೊದಲು ಕೋಟೇಶ್ವರ ಗ್ರಾಮ ಪಂಚಾಯಿತಿಯಿಂದ ಶಾಲಾ ವಠಾರದ ತನಕ ನಡೆದ ಆಕರ್ಷಕ ಮೆರವಣಿಗೆಯಲ್ಲಿ ವಿವಿಧ ರೀತಿಯ ವೇಷಭೂಷಣಗಳು, ಚಿಲಿಪಿಲಿ ಗೊಂಬೆಗಳು, ಯಕ್ಷಗಾನ ವೇಷಧಾ ರಿಗಳು ಕಳಸ ಹಿಡಿದ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು. ವಿದ್ಯಾಂಗ ಉಪನಿರ್ದೇಶಕ ಎನ್.ಕೆ.ಶಿವರಾಜ್ ಸ್ವಾಗತಿಸಿದರು. ಶಿಕ್ಷಕರಾದ ದಿವ್ಯಪ್ರಭಾ ಮತ್ತು ಅನುರಾಧಾ ನಿರೂಪಿಸಿದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ಕಾಂತರಾಜು ವಂದನಾರ್ಪಣೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.