ಮಂಗಳೂರು: ಕನ್ನಡದ ಪ್ರಥಮ ಸುದ್ದಿ ಪತ್ರಿಕೆ ‘ಮಂಗಳೂರ ಸಮಾಚಾರ’ ಮಂಗಳೂರಿನಲ್ಲಿ ಆರಂಭಗೊಂಡ ಕಾರಣ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕವನ್ನು ಮಂಗಳೂರಿನಲ್ಲಿ ನಿರ್ಮಾಣ ಮಾಡಬೇಕು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅಭಿಪ್ರಾಯಪಟ್ಟರು.
ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಗಳೂರಿನ ಬಲ್ಮಠದ ಥಿಯೊಲಾಜಿಕಲ್ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹರ್ಮನ್ ಮೋಗ್ಲಿಂಗ್ ಅವರ ಪ್ರತಿಮೆಗೆ ಗೌರವಾರ್ಪಣೆ ಮಾಡಿ ಅವರು ಮಾತನಾಡಿದರು.
ಮೊಗ್ಲಿಂಗ್ ಸ್ಮಾರಕ ನಿರ್ಮಾಣ ಮಾಡುವ ಸಂಬಂಧ ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗುವುದು ಎಂದರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿ, ನ್ಯಾಯಯುತ ಹಾಗೂ ಸಮಾನತೆಯ ಸಮಾಜ ನಿರ್ಮಾಣದಲ್ಲಿ ಪತ್ರಿಕಾರಂಗದ ಪಾತ್ರ ಪ್ರಮುಖವಾದದ್ದು ಎಂದರು.
ಕರ್ನಾಟಕ ಥಿಯೊಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ಎಚ್.ಎಂ. ವಾಟ್ಸನ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಮಾತನಾಡಿದರು. ಪತ್ರಿಕಾ ಛಾಯಗ್ರಾಹಕ ವಿಶ್ವನಾಥ ಸುವರ್ಣ ಭಾಗವಹಿಸಿದ್ದರು. ಹರೀಶ್ ಬಂಟ್ವಾಳ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.