ಮಂಗಳೂರು: ಆಗಸ್ಟ್ನಲ್ಲಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಯಾ ಗ್ರಾಮದ ಜಾರ್ಡಿನ್ ಅಪಾರ್ಟ್ ಮೆಂಟ್ ನಲ್ಲಿ ನಡೆದಿದ್ದ ಕಳವು ಪ್ರಕರಣ ಭೇದಿಸಿರುವ ಪೊಲೀಸರು ಕೇರಳದ ಇಬ್ಬರು ಹಾಗೂ ಸ್ಥಳೀಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹30 ಲಕ್ಷ ನಗದು ಹಾಗೂ 224 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ವಿದ್ಯಾ ಪ್ರಭು ಅವರ ಫ್ಲ್ಯಾಟ್ ಗೆ ಬಾಲ್ಕನಿ ಮೂಲಕ ನುಗ್ಗಿದ ಆರೋಪಿಗಳಾದ ರಘು ಮತ್ತು ಅಮೇಶ್, ಕಳವು ಮಾಡಿದ್ದರು. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಅದೇ ಫ್ಲ್ಯಾಟ್ ನಲ್ಲಿ ವಾಸವಾಗಿದ್ದ, ಸೇನೆಯಿಂದ ನಿವೃತ್ತಗೊಂಡಿರುವ ನವೀನ್ ಮತ್ತು ವೈನ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಬೆಳ್ತಂಗಡಿಯ ಸಂತೋಷ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಕಳ್ಳತನ ಮಾಡಿದ ಹಣದಲ್ಲಿ ದುಂದುವೆಚ್ಚ ಮಾಡಿದ್ದು, ಅವರ ವಶದಲ್ಲಿದ್ದ ₹30,85,710 ನಗದು ಹಣ ಮತ್ತು 224 ಗ್ರಾಂ ಚಿನ್ನಾಭರಣಗಳನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಕಾರು ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಕೇರಳದ ಇನ್ನೂ ಇಬ್ಬರು ಆರೋಪಿಗಳಿದ್ದು, ಅವರ ಪತ್ತೆಗೆ ಜಾಲ ಬೀಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.