ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಸಂಬಂಧಿಸಿದ 2.71 ಎಕರೆ ಜಾಗವನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ಈ ಸ್ಥಳದಲ್ಲಿ ಪ್ಯಾರಾಮೆಡಿಕಲ್ ಕಾಲೇಜು, ನರ್ಸಿಂಗ್ ಕಾಲೇಜು, ಅಧಿಕಾರಿ– ಸಿಬ್ಬಂದಿಗೆ ವಸತಿ ಗೃಹ ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ಸ್ಥಳವು ನಗರದ ಹೃದಯ ಭಾಗದಲ್ಲಿರುವುದರಿಂದ ಈ ಸ್ಥಳದಲ್ಲಿ ಹೃದಯರೋಗ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಶಾಖೆ ತೆರೆಲು ಪ್ರಯತ್ನ ನಡೆಯುತ್ತಿವೆ. ಈ ಬಗ್ಗೆ ಆರೋಗ್ಯ ಸಚಿವರ ಗಮನಕ್ಕೆ ತರಲಾಗಿದೆ ಎಂದು ಐವನ್ ಡಿಸೋಜ ತಿಳಿಸಿದರು.
ಒಪಿಡಿ ವಿಭಾಗಕ್ಕೆ ₹ 20ಕೋಟಿಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಅದೇ ರೀತಿ 7 ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿ ಪಡಿಸಲು ಬಜೆಟ್‌ನಲ್ಲಿ ಇರಿಸಲಾದ ₹ 800ಕೋಟಿಯಲ್ಲಿ ₹ 100 ಕೋಟಿ ರೂಪಾಯಿಯನ್ನು ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೂ ಇರಿಸಲು ಅವಕಾಶಗಳಿವೆ. ಈ ಹಣವನ್ನು ಬಳಕೆ ಮಾಡಿ ಇಲ್ಲಿ ಪ್ಯಾರಾಮೆಡಿಕಲ್ ಕಾಲೇಜು, ನರ್ಸಿಂಗ್ ಕಾಲೇಜು ಮತ್ತು ಅಧಿಕಾರಿಗಳ ವಸತಿ ಗೃಹ ನಿರ್ಮಿಸುವ ಯೋಜನೆಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದರು.
ಆ.1ರಂದು ಆರೋಗ್ಯ ರಕ್ಷಾ ಸಮಿತಿ ಸಭೆ ಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯಲಿದೆ. ಮುಂದಿನ ಯೋಜನೆಯ ಬಗ್ಗೆ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ, ಈ ಯೋಜನೆಯನ್ನು ಅಂತಿಮಗೊಳಿಸಲು ಅರೋಗ್ಯ ಸಚಿವರನ್ನು ಕೇಳಿಕೊಳ್ಳಲು ವಿನಂತಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಪ್ರಸಾದ್, ವೈದ್ಯಾಧಿಕಾರಿ ಡಾ.ಸುಧಾಕರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ, ಪ್ರಮುಖರಾದ ಪದ್ಮನಾಭ ಅಮೀನ್, ಅನಿಲ್ ರಸ್ಕಿನ್ಹಾ, ಪ್ರಮೀಳಾ ಈಶ್ವರ್, ಮನೀಶ್, ಶಶಿಧರ್ ಬಜಾಲ್, ದಾಮೋದರ್ ಪುತ್ತೂರು ಜತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.