ಮಂಗಳೂರು: ಮಳೆಗಾಲದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ವಿಕೋಪದಿಂದ ಸಂಭವಿಸಬಹುದಾದ ತುರ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವ ಸಲುವಾಗಿ ವಿವಿಧ ಇಲಾಖೆಗಳ ಜೊತೆ ಸಮನ್ವಯ ಸಾಧಿಸಲು ಮತ್ತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಪ್ರತಿ ವಾರ್ಡ್‌ಗೂ ಇನ್ಸಿಡೆಂಟ್ ಕಮಾಂಡರ್‌ಗಳನ್ನು ನೇಮಿಸಿದೆ.
‘ಮಳೆಗಾಲದಲ್ಲಿ ಎಲ್ಲ ಇನ್ಸಿಡೆಂಟ್ ಕಮಾಂಡರ್‌ಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು ತಮ್ಮ ವಾರ್ಡ್‌ಗಳಲ್ಲಿ ಪಾಕೃತಿಕ ವಿಕೋಪ ಸಂಭವಿಸಿದರೆ ಹಾಗೂ ಈ ಸಂಬಂಧ ಸಾರ್ವಜನಿಕರಿಂದ ದೂರುಗಳು ಬಂದರೆ ತುರ್ತಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಕಟ್ಟುನಿಟ್ಟಾದ ನಿರ್ದೇಶನ ನೀಡಲಾಗಿದೆ’ ಎಂದು ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ತಿಳಿಸಿದ್ದಾರೆ.
‘ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಭಾರಿ ಮಳೆಯಿಂದಾಗಿ ಕೆಲವೆಡೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಸಂಭವಿಸಿದೆ. ಭಾರತೀಯ ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಮುಂದಿನ ಕೆಲ ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಸಂಭಾವ್ಯ ವಿಕೋಪಗಳನ್ನು ಎದುರಿಸಲು ಪಾಲಿಕೆ ವತಿಯಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ವಾರ್ಡ್‌ನ ಇನ್ಸಿಡೆಂಟ್ ಕಮಾಂಡರ್‌ಗೆ ಅಹವಾಲು ಸಲ್ಲಿಸಬಹುದು. ಅಥವಾ ಪಾಲಿಕೆಯ ಸಹಾಯವಾಣಿಯನ್ನು (0824-2220306, 2220319) ಸಂಪರ್ಕಿಸಬಹುದು. ಅಥವಾ ವಾಟ್ಸ್ ಆ್ಯಪ್ (ಮೊಬೈಲ್ ಸಂಖ್ಯೆ 9449007722) ಮೂಲಕವೂ ಸಂಪರ್ಕಿಸಬಹುದು ಎಂದು ಅವರು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.
ರಸ್ತೆ, ಗುಡ್ಡ, ಮಣ್ಣು ಅಗೆತ ನಿಷೇಧ:
ಕೆಲವೇ ದಿನಗಳಲ್ಲಿ ಮಳೆಗಾಲದಲ್ಲಿ ಮಣ್ಣು ಕುಸಿತ, ಗುಡ್ಡ ಕುಸಿತ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಪ್ರಾಣ ಹಾನಿ ತಡೆಯಲು ಇದೇ 21ರಿಂದ ಸೆಪ್ಟೆಂಬರ್ 30ರವರೆಗೆ ಯಾವುದೇ ರೀತಿಯ ರಸ್ತೆ ಅಗೆತ, ಗುಡ್ಡ ಅಗೆತ ಹಾಗೂ ಮಣ್ಣು ಅಗೆತದ ಕಾಮಗಾರಿಯನ್ನು ಮಾಡಬಾರದು ಎಂದು ಪಾಲಿಕೆ ಆಯುಕ್ತರು ಆದೇಶ ಮಾಡಿದ್ದಾರೆ.
‘ಈಗಾಗಲೇ ಪಾಲಿಕೆಯಿಂದ ಪರವಾನಗಿ ಪಡೆದು ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಿರುವವರು ನಿರ್ಮಾಣದ ಸ್ಥಳದಲ್ಲಿ ಅಕ್ಕಪಕ್ಕದ ಆಸ್ತಿಗಳಿಗೆ ಹಾನಿಯಾಗದ ರೀತಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮವಹಿಸಿ ಕಾಮಗಾರಿಯನ್ನು ನಿರ್ವಹಿಸಬಹುದು. ಯಾವುದಾದರೂ ಅನಾಹುತ ಸಂಭವಿಸಿ, ಆಸ್ತಿಪಾಸ್ತಿಗಳಿಗೆ ಹಾನಿ ಅಥವಾ ಪ್ರಾಣ ಹಾನಿಯಾದರೇ ಆ ಜಾಗದ ಮಾಲೀಕರು ಹಾಗೂ ಸಂಬಂಧಪಟ್ಟ ಎಂಜಿನಿಯರ್ ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಅವರು ತಿಳಿಸಿದ್ದಾರೆ.
ಈ ಅವಧಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಮಣ್ಣು ಸಾಗಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.