ADVERTISEMENT

ಕೇರಳ ವಿದ್ಯಾರ್ಥಿಗಳ ಮೇಲೆ ನಿಗಾ ; ಶಿಕ್ಷಣ ಇಲಾಖೆ ಸುತ್ತೋಲೆಗೆ ಸಿಪಿಎಂ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2019, 12:02 IST
Last Updated 25 ಡಿಸೆಂಬರ್ 2019, 12:02 IST

ಮಂಗಳೂರು: ನಿಷೇಧಾಜ್ಞೆ ಜಾರಿಯಲ್ಲಿದ್ದ ಅವಧಿಯಲ್ಲಿ ಕೇರಳ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ ಇರಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವುದಕ್ಕೆ ಸಿಪಿಎಂ ಆಕ್ಷೇಪ ವ್ಯಕ್ತಪಡಿಸಿದೆ.

‘ಜಿಲ್ಲೆಯ ಹಲವು ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ತಮ್ಮ ಕಾಲೇಜಿನ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸದಂತೆ ಕ್ರಮ ಕೈಗೊಳ್ಳಬೇಕು. ಕೇರಳ ರಾಜ್ಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕಾಲೇಜುಗಳಲ್ಲಿ ಅವರ ಮೇಲೆ ಪ್ರತ್ಯೇಕವಾಗಿ ನಿಗಾ ಇರಿಸಬೇಕು’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಗುರುವಾರ (ಡಿಸೆಂಬರ್‌ 19) ಹೊರಡಿಸಿದ್ದ ಸುತ್ತೋಲೆಯಲ್ಲಿ ಸೂಚಿಸಿದ್ದರು.

ಈ ಕುರಿತು ಮಂಗಳವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಿಪಿಎಂ ರಾಜ್ಯ ಮಂಡಳಿ ಸದಸ್ಯೆಯೂ ಆಗಿರುವ ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷೆ ಎಸ್‌.ವರಲಕ್ಷ್ಮಿ, ‘ಕೇರಳ ರಾಜ್ಯದ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ ಇಡುವಂತೆ ಸೂಚಿಸಿರುವುದು ಖಂಡನೀಯ. ಸರ್ಕಾರವೇ ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು. ಇಂತಹ ಸುತ್ತೋಲೆ ಹೊರಡಿಸಿದವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.