ಮಂಗಳೂರು: ‘ನಗರದಲ್ಲಿ ಅಕ್ಟೋಬರ್ 28ರಿಂದ ನವೆಂಬರ್ 2ರವರೆಗೆ ‘ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025’ ಬ್ಯಾಡ್ಮಿಂಟನ್ ಟೂರ್ನಿ ನಡೆಯಲಿದೆ’ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ಕಾರ್ಯದರ್ಶಿ ರಾಜೇಶ್ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಈ ಮಾಹಿತಿ ನೀಡಿದ ಅವರು, ‘ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಟೂರ್ನಿ ಆಯೋಜನೆಯಾಗುತ್ತಿದೆ. ಭಾರತವೂ ಸೇರಿದಂತೆ ಸುಮಾರು ಎಂಟು ದೇಶಗಳಿಂದ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಸಿಂಗಲ್ಸ್, ಡಬಲ್ಸ್ ಮತ್ತು ಮಿಶ್ರ ಡಬಲ್ಸ್ ಪಂದ್ಯಗಳಲ್ಲಿ ಸುಮಾರು 150ರಷ್ಟು ಪುರುಷ ಹಾಗೂ 160ರಷ್ಟು ಮಹಿಳಾ ಆಟಗಾರರು ಭಾಗವಹಿಸುವರು. ಯು.ಎಸ್. ಓಪನ್ 2025 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಗೆದ್ದಿರುವ, ಮಂಗಳೂರಿನವರೇ ಆದ ಆಯುಷ್ ಶೆಟ್ಟಿ ಅವರನ್ನೂ ಆಹ್ವಾನಿಸುತ್ತಿದ್ದೇವೆ’ ಎಂದರು.
ಮಂಗಳೂರಿನಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ. ಆಟಗಾರರು, ತೀರ್ಪುಗಾರರು ಸೇರಿದಂತೆ ವಿವಿಧ ರಾಷ್ಟ್ರಗಳ ಸುಮಾರು 600ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದರು.
ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಸಂಸ್ಥೆ ಅಧ್ಯಕ್ಷ ಅಶೋಕ್ ಶೆಟ್ಟಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.