ADVERTISEMENT

ಡಿಸೆಂಬರ್‌ನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ?

ಸಿದ್ಧತೆ ಮಾಡಿಕೊಳ್ಳುವಂತೆ ಚುನಾವಣಾ ಆಯೋಗದ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2019, 10:53 IST
Last Updated 15 ಸೆಪ್ಟೆಂಬರ್ 2019, 10:53 IST

ಮಂಗಳೂರು: ಡಿಸೆಂಬರ್‌ನಲ್ಲಿ ಅವಧಿ ಮುಕ್ತಾಯಗೊಳ್ಳಲಿರುವ ನಗರ ಸ್ಥಳೀಯ ಸಂಸ್ಥೆಗಳ ಜೊತೆಯಲ್ಲೇ ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‌ಗಳಿಗೂ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಶುಕ್ರವಾರ ನಿರ್ದೇಶನ ನೀಡಿದೆ.

ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ವಾರು ಮೀಸಲಾತಿಗೆ ಸಂಬಂಧಿಸಿದ ಪ್ರಕರಣ ಹೈಕೋರ್ಟ್‌ನಲ್ಲಿದೆ. ಇದರಿಂದಾಗಿ ಚುನಾವಣೆ ವಿಳಂಬವಾಗಿದೆ. ಡಿಸೆಂಬರ್‌ನಲ್ಲಿ ಹಲವು ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯವಾಗಲಿದೆ. ಅವುಗಳ ಜೊತೆಯಲ್ಲೇ ಮಂಗಳೂರು ಮಹಾನಗರ ಪಾಲಿಕೆಗೂ ಚುನಾವಣೆ ನಡೆಸಲು ಸಿದ್ಧತೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗ ಸೂಚಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆ, ಮತದಾನ ಕೇಂದ್ರಗಳ ಪಟ್ಟಿ ಸಿದ್ಧಪಡಿಸುವುದು, ಮತಗಟ್ಟೆ ಸಿಬ್ಬಂದಿ ನೇಮಕ, ವಿದ್ಯುನ್ಮಾನ ಮತಯಂತ್ರಗಳ ಸಂಗ್ರಹಣೆ, ಚುನಾವಣಾಧಿಕಾರಿ ಸಹಾಯಕ ಚುನಾವಣಾಧಿಕಾರಿಗಳ ನೇಮಕಾತಿ, ಚುನಾವಣಾ ವೆಚ್ಚ ಪರಿಶೀಳನೆಗೆ ಅಧಿಕಾರಿಗಳ ನೇಮಕ, ಗುರುತು ಸೀಲುಗಳ ತಯಾರಿಕೆ ಹಾಗೂ ನಿರ್ವಹಣೆ, ಚುನಾವಣಾ ಸಾಮಗ್ರಿಗಳ ಸಂಗ್ರಹ ಮತ್ತು ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಸಿದ್ಧತೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ADVERTISEMENT

ದಾವಣಗೆರೆ ಮಹಾನಗರ ಪಾಲಿಕೆ, ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಏಳು ಜಿಲ್ಲೆಗಳ 17 ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟಿಗೆ ಚುನಾವಣೆ ನಡೆಸಲು ಆಯೋಗ ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.