ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಯಡಿ ಬಿಡುಗಡೆಯಾಗುವ ಅನುದಾನದ ಸಮರ್ಪಕ ಬಳಕೆ ಮತ್ತು ಕಾಮಗಾರಿಗಳು ಗುಣಮಟ್ಟದಲ್ಲಿ ಅನುಷ್ಠಾನಗೊಂಡಿರುವ ಬಗ್ಗೆ ನಿಖರವಾಗಿ ಪರಿಶೀಲಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ. ರಾಜು ಹೇಳಿದರು.
ಗುರುವಾರ ಇಲ್ಲಿ ನಡೆದ ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿ ಹೊಸ 15 ಅಂಶಗಳ ಹಾಗೂ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
ಅಲ್ಪಸಂಖ್ಯಾತ ಇಲಾಖೆ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಲು ಆದ್ಯತೆ ನೀಡಬೇಕು. ಉತ್ತಮ ಫಲಿತಾಂಶ ಬರುವಂತೆ ವಹಿಸಬೇಕು. ವಸತಿ ಶಾಲೆ ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ 13 ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 2,700 ಸೀಟ್‌ಗಳಿವೆ, 1,069 ಸೀಟ್‌ಗಳು ಭರ್ತಿಯಾಗಿವೆ ಎಂದರು.
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ 2024- 25ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಚರ್ಚ್ ದುರಸ್ತಿ, ಕಾಂಪೌಂಡ್ ನಿರ್ಮಾಣ, ಸ್ಮಶಾನ ಭೂಮಿ ಅಭಿವೃದ್ಧಿ ಯೋಜನೆಗಳಿಗೆ 86 ಸಂಸ್ಥೆಗಳಿಗೆ ₹12.82 ಕೋಟಿ ಬಿಡುಗಡೆ ಮಾಡಲಾಗಿದೆ. ಜೈನ ಬಸದಿ ಮತ್ತು ಸಮುದಾಯ ಭವನಗಳ ಅಭಿವೃದ್ಧಿಗೆ 21 ಸಂಸ್ಥೆಗಳಿಗೆ ₹5.52 ಕೋಟಿ ಹಾಗೂ ಮದರಸಗಳಿಗೆ ಕಂಪ್ಯೂಟರ್ ಹಾಗೂ ಇನ್ನಿತರ ಸೌಕರ್ಯಕ್ಕಾಗಿ 19 ಸಂಸ್ಥೆಗಳಿಗೆ ₹95 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಕಳೆದ ವರ್ಷ ಜಿಲ್ಲೆಯಲ್ಲಿ 1,066 ಫಲಾನುಭವಿಗಳಿಗೆ ₹10.67 ಕೋಟಿ ಮೊತ್ತದ ಸೌಲಭ್ಯ ವಿತರಿಸಲಾಗಿದೆ ಎಂದು ನಿಗಮದ ಅಧಿಕಾರಿ ತಿಳಿಸಿದರು.
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಂತೋಷಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್, ಸಮಿತಿ ಸದಸ್ಯರಾದ ಸುಭಾಸ್ ಚೌಟ, ಮನ್ಸೂರ್ ಆಝಾದ್, ಅಫ್ತಾಬ್ ಹುಸೇನ್, ಪೀಟರ್, ವಿಸ್ತರಣಾಧಿಕಾರಿ ಮುಹಮ್ಮದ್ ಫಾರೂಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.