ADVERTISEMENT

ವಿಧಾನ ಪರಿಷತ್ ಚುನಾವಣೆ: ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಕಣದಿಂದ ಹಿಂದೆ ಸರಿದ ಎಂಎನ್‌ಆರ್‌: ಬಿಜೆಪಿ ಅಭ್ಯರ್ಥಿಯಾಗಿ ಕೋಟ ನಾಮಪತ್ರ

ಚಿದಂಬರ ಪ್ರಸಾದ್
Published 21 ನವೆಂಬರ್ 2021, 2:57 IST
Last Updated 21 ನವೆಂಬರ್ 2021, 2:57 IST
ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಚುನಾವಣಾ ಅಧಿಕಾರಿಯೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಸಚಿವ ಎಸ್‌. ಅಂಗಾರ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಸಚಿವ ಸುನಿಲ್‌ಕುಮಾರ್ ಇದ್ದರು.
ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಚುನಾವಣಾ ಅಧಿಕಾರಿಯೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಸಚಿವ ಎಸ್‌. ಅಂಗಾರ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಸಚಿವ ಸುನಿಲ್‌ಕುಮಾರ್ ಇದ್ದರು.   

ಮಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಸ್ಪರ್ಧೆ ಬಯಸಿ, ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಮಧ್ಯೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಎಂ.ಎನ್‌. ರಾಜೇಂದ್ರಕುಮಾರ್‌, ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ.

ಈ ಮಧ್ಯೆ ಕಾಂಗ್ರೆಸ್‌ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ. ಹಾಗಾಗಿ ಕಾಂಗ್ರೆಸ್‌ನಿಂದ ಎರಡನೇ ಸ್ಥಾನಕ್ಕೆ ಯಾರು ಸ್ಪರ್ಧಿಸಲಿದ್ದಾರೆ ಎನ್ನುವ ಕುತೂಹಲ ಕ್ಷೇತ್ರದ ಮತದಾರರದ್ದಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನವದೆಹಲಿಗೆ ತೆರಳಿದ್ದು, ಭಾನುವಾರ ಅಭ್ಯರ್ಥಿಯ ಆಯ್ಕೆ ಆಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನಿಂದ 11 ಅಭ್ಯರ್ಥಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಮಧ್ಯೆ ಎಂ.ಎನ್‌. ರಾಜೇಂದ್ರಕುಮಾರ್ ಅವರನ್ನೇ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲು ಉಡುಪಿ ಜಿಲ್ಲಾ ಘಟಕದ ಮುಖಂಡರು ಯೋಜನೆ ರೂಪಿಸಿದ್ದರು. ಆದರೆ, ರಾಜೇಂದ್ರಕುಮಾರ್‌ ಸ್ಪರ್ಧೆಯಿಂದ ಹಿಂದೆ ಸರಿದಿರುವುದರಿಂದ ಅಭ್ಯರ್ಥಿಯ ಆಯ್ಕೆ ಕಗ್ಗಂಟಾಗಿದೆ.

ADVERTISEMENT

ಮೂಲಗಳ ಪ್ರಕಾರ ಮಂಜುನಾಥ ಭಂಡಾರಿ ಅವರ ಹೆಸರು ಅಂತಿಮವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮಧ್ಯೆ ಐವನ್‌ ಡಿಸೋಜ, ಪಿ.ವಿ. ಮೋಹನ್‌ ಕೂಡ ಎಐಸಿಸಿ ಮಟ್ಟದಲ್ಲಿ ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯವರಿಗೇ ಟಿಕೆಟ್‌ ನೀಡಬೇಕು ಎನ್ನುವ ಒತ್ತಾಯ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮತಗಳ ಲೆಕ್ಕಾಚಾರ: ಇದುವರೆಗೆ ದ್ವಿಸದಸ್ಯ ಸ್ಥಾನದಲ್ಲಿ ತಲಾ ಒಂದು ಸ್ಥಾನವನ್ನು ಬಿಜೆಪಿ ಹಾಗೂ ಕಾಂಗ್ರೆಸ್‌ ಪಡೆದಿದ್ದವು. ಆದರೆ, ಈ ಬಾರಿ ಬಿಜೆಪಿ ಹೆಚ್ಚು ಮತದಾರರನ್ನು ಹೊಂದಿದ್ದು, ಇನ್ನೊಬ್ಬ ಅಭ್ಯರ್ಥಿಯ ಆಯ್ಕೆಗೆ ಕಾಂಗ್ರೆಸ್‌ಗೆ 150 ರಷ್ಟು ಮತಗಳ ಕೊರತೆ ಇದೆ ಎಂದು ಹೇಳಲಾಗುತ್ತಿದೆ.

ಉಭಯ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಸದಸ್ಯರೇ ಅಧಿಕವಾಗಿದ್ದು, ಸುಲಭದಲ್ಲಿ ಒಂದು ಸ್ಥಾನವನ್ನು ಗೆಲ್ಲುವುದಾಗಿ ಬಿಜೆಪಿ ನಾಯಕರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಕೊರತೆ ಇರುವ ಮತಗಳನ್ನು ಪಡೆದು, ಜಯ ಸಾಧಿಸಬಲ್ಲ ಅಭ್ಯರ್ಥಿಗಾಗಿ ಕಾಂಗ್ರೆಸ್‌ ಹುಡುಕಾಡುವುದು ಇದೀಗ ಅನಿವಾರ್ಯವಾಗಿದೆ.

ಹೀಗಾಗಿಯೇ ಅಳೆದು ತೂಗಿ, ಅಭ್ಯರ್ಥಿಯನ್ನು ಅಂತಿಮಗೊಳಿಸಲು ಪಕ್ಷದ ವರಿಷ್ಠರು ಮುಂದಾಗಿದ್ದಾರೆ. ಹಲವಾರು ಸುತ್ತಿನ ಮಾತುಕತೆಗಳು ನಡೆದಿದ್ದು, ಸೋಮವಾರ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಹಿರಿಯರನ್ನು ಭೇಟಿಯಾದ ಕೋಟ

ಶನಿವಾರ ನಾಮಪತ್ರ ಸಲ್ಲಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪಕ್ಷದ ಹಿರಿಯರನ್ನು ಭೇಟಿ ಮಾಡಿದರು. ಉಡುಪಿ ಪುರಸಭಾ ಮಾಜಿ ಅಧ್ಯಕ್ಷ ಮಲ್ಪೆ ಸೋಮಶೇಖರ್ ಭಟ್ ಅವರ ಮನೆಗೆ ಬಂದು ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಭಟ್ಟರು, ‘ಹೆಚ್ಚು ಅಂತರದಿಂದ ಗೆದ್ದು, ಮತ್ತಷ್ಟು ರಾಜ್ಯದ ಜನಸೇವೆ ಮಾಡಲು ಅವಕಾಶ ಸಿಗಲಿ’ ಎಂದು ಹಾರೈಸಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಕೋಟೇಶ್ವರ ಪಂಚಾಯಿತಿ ಅಧ್ಯಕ್ಷ ಕೃಷ್ಣ ಗೊಲ್ಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.