ಪುತ್ತೂರು: ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ ಮಕ್ಕಳಿಗೆ ಮಾನವೀಯತೆ, ಸಹೋದರತ್ವ ತುಂಬಿದ ಮೌಲ್ಯಾಧಾರಿತ ಶಿಕ್ಷಣ ನೀಡುವುದೇ ನಿಜವಾದ ದೇಶಪ್ರೇಮ ಎಂದು ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಪುತ್ತೂರಿನ ನೆಹರೂ ನಗರದ ಸುದಾನ ವಿದ್ಯಾಸಂಸ್ಥೆಯಲ್ಲಿ ಆರಂಭಿಸಲಾದ ಪದವಿಪೂರ್ವ ಕಾಲೇಜನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಡತನದಿಂದ ದೂರವಾಗಲು ಶಿಕ್ಷಣದಿಂದ ಮಾತ್ರ ಸಾಧ್ಯ. ಉತ್ತಮ ಶಿಕ್ಷಣ ಪಡೆದರೆ ಕುಟುಂಬವೂ ಉನ್ನತ ಸ್ಥಾನ ಪಡೆದುಕೊಳ್ಳುತ್ತದೆ. ಶಿಕ್ಷಣದ ಜತೆಗೆ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ಮಾನವೀಯತೆ, ತಾಳ್ಮೆಯ ಗುಣಗಳೂ ಇರಬೇಕು ಎಂದರು.
ಯುವಜನತೆ ಶಿಕ್ಷಣದ ಜತೆಗೆ ಸಾಹಿತ್ಯದತ್ತ ಹೆಚ್ಚಿನ ಒಲವು ಬೆಳೆಸಿಕೊಳ್ಳಬೇಕಾಗಿದೆ. ಸಾಹಿತ್ಯ ಕ್ಷೇತ್ರದಲ್ಲಿ ಯುವ ಜನತೆಯ ಕೊರತೆ ಎದ್ದು ಕಾಣುತ್ತಿದೆ ಎಂದು ಅವರು ಹೇಳಿದರು.
ಸುದಾನ ವಿದ್ಯಾಸಂಸ್ಥೆಯ ಅಧ್ಯಕ್ಷ ವಿಜಯ ಹಾರ್ವಿನ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ, ಸವಣೂರಿನ ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಭಾಗವಹಿಸಿದ್ದರು.
ಸುದಾನ ವಿದ್ಯಾಸಂಸ್ಥೆಗಳ ಆಡಳಿತ ಸಮಿತಿ ಕಾರ್ಯದರ್ಶಿ ಪೀಟರ್ ವಿಲ್ಸನ್ ಪ್ರಭಾಕರ್ ಸ್ವಾಗತಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುಪ್ರೀತ್ ಕೆ.ಸಿ ವಂದಿಸಿದರು. ಶಿಕ್ಷಕಿಯರಾದ ಕ್ಯಾರಲ್ ಫರ್ನಾಂಡಿಸ್, ಧನ್ಯಶ್ರೀ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.