ADVERTISEMENT

ಸುರಕ್ಷಾ ಕ್ರಮ ಕೈಗೊಳ್ಳಲು ಸಂಸದರ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2023, 15:53 IST
Last Updated 6 ಜುಲೈ 2023, 15:53 IST
ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಗುರುವಾರ ಮಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿದರು
ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಗುರುವಾರ ಮಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿದರು   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಗುರುವಾರ ಅಧಿಕಾರಿಗಳ ಸಭೆ ನಡೆಸಿದರು.

ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಎಂಜಿನಿಯರ್‌ಗಳ ಜತೆ ಚರ್ಚಿಸಿದರು. ರಾಷ್ಟ್ರೀಯ ಹೆದ್ದಾರಿಯ ನೂತನ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಮಳೆ ನೀರು ಹರಿಯಲು ಯಾವುದೇ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಗಾಳಿ ಮಳೆಯಿಂದ ವಿದ್ಯುತ್  ಕಂಬ ಮುರಿದು ಅನಾಹುತ ಸಂಭವಿಸಿದಲ್ಲಿ, ಕೂಡಲೇ ಅಗತ್ಯ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಮೆಸ್ಕಾ ಅಧಿಕಾರಿಗಳಿಗೆ ತಿಳಿಸಿದರು. ಚಾರ್ಮಡಿ ಘಾಟಿಯಲ್ಲಿ ಭೂಕುಸಿತ ಅಥವಾ ಮರಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಲ್ಲಿ ಕೂಡಲೇ ತೆರವುಗೊಳಿಸಲು ಕ್ಷಿಪ್ರ ತಂಡವನ್ನು ಸಿದ್ಧವಾಗಿರಿಸುವಂತೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್‌ಗೆ ಸೂಚಿಸಿದರು.

ADVERTISEMENT

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಉಪ ಅರಣ್ಯ ಸಂರಕ್ಷಣಾಧಿಕಾರಿ, ಹೆದ್ದಾರಿ ಭೂಸ್ವಾಧೀನ ಅಧಿಕಾರಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.