ADVERTISEMENT

ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ನಿರ್ವಾಹಕನ ವಜಾಕ್ಕೆ ಸಚಿವರ ಸೂಚನೆ

ಬಂಧಿತ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಅಮಾನತು

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2025, 15:30 IST
Last Updated 24 ಏಪ್ರಿಲ್ 2025, 15:30 IST
<div class="paragraphs"><p>ಕೆಎಸ್‌ಆರ್‌ಟಿಸಿ</p></div>

ಕೆಎಸ್‌ಆರ್‌ಟಿಸಿ

   

ಉಳ್ಳಾಲ (ದಕ್ಷಿಣ ಕನ್ನಡ): ಮುಡಿಪು - ಮಂಗಳೂರು ಸ್ಟೇಟ್‌ ಬ್ಯಾಂಕ್‌ ನಡುವೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಿದ್ದೆ ಹೋಗಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ನಿರ್ವಾಹಕನನ್ನು ಕೊಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ ಮೂಲದ ಪ್ರದೀಪ್‌ ಕಾಶಪ್ಪ ನಾಯ್ಕರ್‌ (35) ಈ ಕೃತ್ಯವೆಸಗಿದ ಆರೋಪಿ.

ADVERTISEMENT

ಕೆಎಸ್‌ಆರ್‌ಟಿಸಿಯು ಪ್ರದೀಪ್‌ನನ್ನು ಸೇವೆಯಿಂದ ಅಮಾನತುಗೊಳಿಸಿದೆ.

ನಿರ್ವಾಹಕ ಪ್ರದೀಪ್‌ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏ. 22ರಂದು ಯುವತಿಯ ತೋಳ ಸಂದಿಯಲ್ಲಿ ಕೈತೂರಿ ಲೈಂಗಿಕ ಕಿರುಕುಳ ನೀಡಿದ್ದ. ದೃಶ್ಯವನ್ನು ಬಸ್‌ನ ಪ್ರಯಾಣಿಕರರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆಯೇ ಕೊಣಾಜೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

‘ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 74  (ಮಹಿಳೆಯ ಮಾನಭಂಗ ಯತ್ನ)  ಹಾಗೂ ಸೆಕ್ಷನ್ 75ರ (ಮಹಿಳೆಗೆ ಲೈಂಗಿಕ ಕಿರುಕುಳ) ಅಡಿ  ಎಫ್‌ಐಆರ್ ದಾಖಲಾಗಿದೆ’ ಎಂದು ಮಂಗಳೂರು ಪೊಲೀಸ್‌ ಕಮಿಷನರ್ ಅನುಪಮ್ ಅಗ್ರವಾಲ್‌ ತಿಳಿಸಿದ್ದಾರೆ.

ನಿರ್ವಾಹಕನ ವಜಾಕ್ಕೆ ಸಚಿವ ಸೂಚನೆ: ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ನಿರ್ವಾಹಕ ಕೆಟ್ಟದಾಗಿ ನಡೆದುಕೊಂಡಿರುವ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮುಗಿಸಬೇಕು. ಆರೋಪಿ ನಿರ್ವಾಹಕನನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ.

‘ಕೆಎಸ್ಆರ್‌ಟಿಸಿ ಬಸ್‌ ಚಾಲಕರು, ನಿರ್ವಾಹಕರ ಬಗ್ಗೆ ಪ್ರಯಾಣಿಕರು ಅತೀವ ನಂಬಿಕೆ ಮತ್ತು ಪ್ರೀತಿ ಹೊಂದಿದ್ದಾರೆ. ಕೆಲವೊಬ್ಬರು ಮಾಡುವ ಈ ರೀತಿಯ ಕೆಲಸಗಳು ಸಂಸ್ಥೆ ಹಾಗೂ ಸಿಬ್ಬಂದಿಯ ಗೌರವಕ್ಕೆ ಧಕ್ಕೆ ತರುತ್ತವೆ. ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಹೆಣ್ಣು ಮಕ್ಕಳೊಡನೆ ಗೌರವದೊಂದಿಗೆ ನಡೆದುಕೊಳ್ಳುವುದು ನಮ್ಮ ಸಿಬ್ಬಂದಿಯ ಆದ್ಯ ಕರ್ತವ್ಯವಾಗಿರಬೇಕು. ಈ ರೀತಿಯ ಅಸಹ್ಯಕರ ನಡವಳಿಕೆ ಅಕ್ಷಮ್ಯ ಅಪರಾಧ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.