ಮಂಗಳೂರು: ಇದೇ 26ರವರೆಗೆ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರಾಕೃತಿಕ ವಿಕೋಪ ನಿಭಾಯಿಸಲು ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಆರಂಭಿಸಿದೆ.
ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಬಿದ್ದರೆ ತಾಲ್ಲೂಕು ಕೇಂದ್ರಗಳಲ್ಲಿ ಕಾಳಜಿ ಕೇಂದ್ರ ಸ್ಥಾಪಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾಡಳಿತವು ನೇಮಿಸಿರುವ ಇನ್ಸಿಡೆಂಟ್ ಕಮಾಂಡರ್‌ಗಳು ಸದಾ ಸನ್ನದ್ಧವಾಗಿದ್ದು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಬೇಕು. ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿ ಜೊತೆ ನಿರಂತರ ಸಂಪರ್ಕದಲ್ಲಿರಬೇಕು. ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನವನ್ನು ತೊರೆಯುವಂತಿಲ್ಲ ಎಂದು ಪ್ರಾಧಿಕಾರ ಸೂಚಿಸಿದೆ.
ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಬಾರದು. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿರುವ ದೋಣಿಗಳು ತಕ್ಷಣ ದಡಕ್ಕೆ ಮರಳಬೇಕು. ಪ್ರವಾಸಿಗರು ನದಿ ಅಥವಾ ಸಮುದ್ರ ತೀರಕ್ಕೆ ತೆರಳಬಾರದು. ತಗ್ಗು ಪ್ರದೇಶ, ಕೆರೆ, ನದಿ ಅಥವಾ ಸಮುದ್ರಕ್ಕೆ ಮಕ್ಕಳು ತೆರಳದಂತೆ ಪೋಷಕರು ಎಚ್ಚರ ವಹಿಸಬೇಕು ಎಂದು ಪ್ರಾಧಿಕಾರವು ಸಲಹೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.