ಮಂಗಳೂರು: ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ಬಳ್ಳಾರಿ ಮತ್ತು ಪಾಲಕ್ಕಾಡ ದಿಂದ 25 ಟನ್ ಆಮ್ಲಜನಕ ಪೂರೈಕೆಯಾಗು ತ್ತಿದ್ದು, ಈವರೆಗೆ ಸರಬರಾಜಿನಲ್ಲಿ ಕೊರತೆ ಆಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.
ಆಮ್ಲಜನಕದ ಸ್ಥಿತಿಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 3 ವೈದ್ಯಕೀಯ ಆಮ್ಲಜನಕ ತುಂಬುವ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ಆಸ್ಪತ್ರೆಗಳಿಗೆ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ. ಪಾಲ್ಘಾಟ್‌ನ ಐನಾಕ್ಸ್‌ನಿಂದ ಜಿಲ್ಲೆಗೆ ದ್ರವೀಕೃತ ಆಮ್ಲಜನಕ ಪೂರೈಕೆಯಲ್ಲಿ ವಿಳಂಬವಾದ್ದರಿಂದ ಆಸ್ಪತ್ರೆಗಳಿಗೆ ಬೇಕಾದಷ್ಟು ಆಮ್ಲಜನಕ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಆದರೆ, ಪ್ರಸ್ತುತ ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಿಲ್ಲ. ಈ ಬಗ್ಗೆ ಸಾರ್ವಜನಿಕರು ಗಾಬರಿಗೊಳ್ಳುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಸದ್ಯ ಜಿಲ್ಲೆಯಲ್ಲಿ 430 ಮಂದಿಗೆ ಆಮ್ಲಜನಕ ಸೌಲಭ್ಯವುಳ್ಳ ಹಾಸಿಗೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 200ಕ್ಕೂ ಹೆಚ್ಚು ಜನರು, ಐಸಿಯು, ವೆಂಟಿಲೇಟರ್ ಸೌಲಭ್ಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ವೆನ್ಲಾಕ್‌ನಲ್ಲಿ ಹೆಚ್ಚುವರಿ ವೆಂಟಿಲೇಟರ್ ಜೋಡಿಸಲು ತುರ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಹೊಸ ಆಮ್ಲಜನಕ ಉತ್ಪಾದನಾ ಘಟಕಗಳು, ಜಿಲ್ಲೆಯಲ್ಲಿ ಕೋವಿಡ್–19 ಸ್ಥಿತಿ ಎದುರಿಸಲು ಕೈಗೊಂಡ ಕ್ರಮಗಳ ಕುರಿತು ಡಿಎಚ್‌ಒ ಡಾ.ಕಿಶೋರ್ ಕುಮಾರ್, ವೆನ್ಲಾಕ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಸದಾಶಿವ ಶ್ಯಾನುಭೋಗ್ ವಿವರಿಸಿದರು.
ಎಂತಹ ಕಠಿಣ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿರಬೇಕು. ಅಗತ್ಯವಿರುವ ಮೂಲಸೌಲಭ್ಯಗಳನ್ನು ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್‌ಕುಮಾರ್ ಕಟೀಲ್ ಸೂಚನೆ ನೀಡಿದರು.
ಶಾಸಕ ಡಾ.ವೈ.ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.