ADVERTISEMENT

ಪ್ರಧಾನಿ ಕಾರ್ಯಕ್ರಮದ ಸಿದ್ಧತೆ ಅಂತಿಮ ಹಂತದಲ್ಲಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2022, 8:55 IST
Last Updated 31 ಆಗಸ್ಟ್ 2022, 8:55 IST
   

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಎಲ್ಲ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯ ಸರ್ಕಾರ, ನವ ಮಂಗಳೂರು ಬಂದರು ಪ್ರಾಧಿಕಾರ, ಎಂಆರ್ ಪಿಎಲ್, ಸಂಬಂಧಪಟ್ಟ ಇಲಾಖೆಗಳು ಎಲ್ಲರೂ ಸೇರಿ ಕಾರ್ಯಕ್ರಮದ ಸಿದ್ಧತೆ ಕಾರ್ಯ‌ ಮಾಡುತ್ತಿದ್ದಾರೆ. ಪ್ರಧಾನಮಂತ್ರಿ ನೇರವಾಗಿ ಎನ್ ಎಂಪಿಎಗೆ ಬಂದು, ಅಲ್ಲಿ ಆರು ಯೋಜನೆಗಳ ಶಂಕುಸ್ಥಾಪನೆ ನಡೆಸುವರು ಎಂದರು.

ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಸೆ. 2ರಂದು ಮಧ್ಯಾಹ್ನ 1 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಜನರು ಮುಂಚಿತವಾಗಿ ಸಭಾ ಮೈದಾನಕ್ಕೆ ಬರಬೇಕು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಹಿತ ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ADVERTISEMENT

ಫಲಾನುಭವಿಗಳಿಗೆ ಕಡ್ಡಾಯವಾಗಿ ಭಾಗವಹಿಸಲು ನಿರ್ದೇಶನ ನೀಡಿಲ್ಲ, ಮನವಿ ಮಾಡಲಾಗಿದೆ ಅಷ್ಟೆ ಎಂದು ಹೇಳಿದರು.
ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿ, ಪ್ರಧಾನಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುತ್ತಿದ್ದು, ಸಿಎಆರ್, ಕೆಎಸ್‌ಆರ್‌ಪಿ, ಹೋಮ್‌ಗಾರ್ಡ್ ಸಹಿತ ವಿವಿಧ ಘಟಕಗಳ ಅಧಿಕಾರಿ, ಸಿಬ್ಬಂದಿಯನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ ಎಂದರು.

ಕಮಿಷನರೇಟ್ ವ್ಯಾಪ್ತಿಯ 9 ಜಂಕ್ಷನ್‌ಗಳಲ್ಲಿ‌ ಸಂಚಾರ ಮಾರ್ಗ ಬದಲಾವಣೆ ಮಾಡಲಾಗುತ್ತದೆ. 15 ಕಡೆಗಳಲ್ಲಿ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಕಾರ್ಯಕ್ರಮದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ. ಈಗಾಗಲೇ ಈ ಸಂಬಂಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.