ADVERTISEMENT

ಪಲ್ಸ್ ಪೋಲಿಯೊ ಕಾರ್ಯಕ್ರಮ ನಾಳೆ

ಜಿಲ್ಲೆಯಲ್ಲಿ 921 ಬೂತ್‌ಗಳು: ಡಿಎಚ್‌ಒ ಡಾ.ರಾಮಚಂದ್ರ ಬಾಯರಿ

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 13:21 IST
Last Updated 29 ಜನವರಿ 2021, 13:21 IST
ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಡಿಎಚ್‌ಒ ಡಾ. ರಾಮಚಂದ್ರ ಬಾಯರಿ ಮಾತನಾಡಿದರು.
ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಡಿಎಚ್‌ಒ ಡಾ. ರಾಮಚಂದ್ರ ಬಾಯರಿ ಮಾತನಾಡಿದರು.   

ಮಂಗಳೂರು: ರಾಷ್ಟ್ರೀಯ ಪಲ್ಸ್‌ ಪೋಲಿಯೊ ಕಾರ್ಯಕ್ರಮವು ಇದೇ 31ರಂದು ನಡೆಯಲಿದೆ. ಅಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಹನಿ ಹಾಕಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಲಸಿಕೆ ಅಭಿಯಾನದ ಕಾರಣಕ್ಕೆ ಜನವರಿ 17ರಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬೆಳಿಗ್ಗೆ 8 ಕ್ಕೆ ಮಗುವಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸುವರು. ಸಚಿವ ಎಸ್.ಅಂಗಾರ, ಶಾಸಕರು, ಜನಪ್ರತಿನಿಧಿಗಳು ಭಾಗವಹಿಸುವರು ಎಂದರು.

ಐದು ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಪೋಲಿಯೊ ಲಸಿಕೆ ಹಾಕಿಸಿದ್ದರೂ, ಈಗ ಮತ್ತೊಮ್ಮೆ ಹಾಕಿಸಬಹುದು. ಲಸಿಕಾ ಕೇಂದ್ರಕ್ಕೆ ಮಕ್ಕಳನ್ನು ಕರೆತರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಜಿಲ್ಲೆಯಲ್ಲಿ ಒಟ್ಟು 921 ಬೂತ್‌ಗಳ ವ್ಯವಸ್ಥೆ ಮಾಡಲಾಗಿದೆ. ಆರು ಮೊಬೈಲ್ ಬೂತ್‌ಗಳಿವೆ. ಬಸ್, ರೈಲ್ವೆ, ವಿಮಾನ ನಿಲ್ದಾಣಗಳಲ್ಲಿ 26 ಟ್ರಾನ್ಸಿಟ್ ತಂಡಗಳು ಕಾರ್ಯನಿರ್ವಹಿಸಲಿವೆ. ಹನಿ ಹಾಕಲು ಜಿಲ್ಲೆಯಲ್ಲಿ ಸುಮಾರು 1,51,398 ಮಕ್ಕಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ADVERTISEMENT

2014ರಲ್ಲಿ ಭಾರತ ‘ಪೋಲಿಯೊ ಮುಕ್ತ ರಾಷ್ಟ್ರ’ ಪ್ರಮಾಣಪತ್ರ ಪಡೆದಿದೆ. ಆದರೆ, ನೆರೆಯ ದೇಶಗಳಲ್ಲಿ ಪೋಲಿಯೊ ಪ್ರಕರಣಗಳಿವೆ. ಯಾವುದೇ ಕಾರಣಕ್ಕೂ ಇಲ್ಲಿನ ಮಕ್ಕಳಲ್ಲಿ ಮತ್ತೆ ಈ ಕಾಯಿಲೆ ಕಾಣಿಸಿಕೊಳ್ಳಬಾರದೆಂದು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ರಾಜೇಶ್ ಬಿ.ವಿ., ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಜ್ಯೋತಿ, ಜಿಲ್ಲಾ ಶುಶ್ರೂಷಣಾ ಅಧಿಕಾರಿ ಲೆಸ್ಸಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.