
ಪುತ್ತೂರು: ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ದ.ಕ. ಜಿಲ್ಲಾಡಳಿತ ವತಿಯಿಂದ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಸಹಯೋಗದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಳದ ಸಹಕಾರದೊಂದಿಗೆ ಗಡಿ-ಸಂಸ್ಕೃತಿ ಉತ್ಸವದ ಅಂಗವಾಗಿ ‘ಕಲಾರ್ಣವ-2025’ ಭಾವ-ರಾಗ-ತಾಳ ಕಾರ್ಯಕ್ರಮ ಡಿ.20ರಂದು ಸಂಜೆ 4.30ರಿಂದ ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ನೃತ್ಯೋಪಾಸನಾ ಕಲಾ ಅಕಾಡೆಮಿ ಸ್ಥಾಪಕ ಟ್ರಸ್ಟಿ, ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ತಿಳಿಸಿದ್ದಾರೆ.
ಅಂದು ಸಂಜೆ 5.30ರಿಂದ ನಡೆಯುವ ಸಭಾ ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸುವರು. ಎಡನೀರು ಮಠಾಧೀಶ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರು ಆಶೀರ್ವಚನ ನೀಡುವರು. ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸುವರು. ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಪುತ್ತೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್, ಗಡಿ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಭಾಗವಹಿಸುವರು.
ಸಂಜೆ 4.30ರಿಂದ ಜಾನಪದ ನೃತ್ಯ ವೈವಿಧ್ಯ, 6.15ರಿಂದ ಬಾಲ ಕಲಾವಿದ ಮಾಸ್ಟರ್ ಶಮಂತಕ ಅವರಿಂದ ಭರತನಾಟ್ಯ, ಸಂಜೆ 7ರಿಂದ ಬಾಲ ಕಲಾವಿದೆ ಗಂಗಾ ಶಶಿಧರನ್ ಅವರಿಂದ ವಯಲಿನ್ ವೈಭವ ನಡೆಯಲಿದೆ. ಸಭಾ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಲಾಗುವುದು ಎಂದರು.
2004ರಲ್ಲಿ ಸ್ಥಾಪನೆಯಾದ ನೃತ್ಯೋಪಾಸನಾ ಕಲಾ ಅಕಾಡೆಮಿ ಪುತ್ತೂರು, ಉಪ್ಪಿನಂಗಡಿ, ಕುಕ್ಕೆ ಸುಬ್ರಹ್ಮಣ್ಯ, ವಿಟ್ಲದಲ್ಲಿ ನೃತ್ಯ ಶಿಕ್ಷಣ ನೀಡುತ್ತಿದೆ. ನೃತ್ಯ ಶಿಕ್ಷಣ ಪೋಷಣೆ ಯೋಜನೆಯಡಿ ಹಿಂದುಳಿದ ಆಸಕ್ತ ಅರ್ಹ ವಿದ್ಯಾರ್ಥಿಗಳಿಗೆ ಉಚಿತವಾಗಿ ಭರತನಾಟ್ಯ ನೃತ್ಯ ತರಗತಿ ನಡೆಸಲಾಗುತ್ತಿದೆ. ಸಾಧಕ ಹಿರಿಯ ಕಲಾವಿದರಿಗೆ ನೃತ್ಯೋಪಾಸನಾ ಗೌರವ ಪುರಸ್ಕಾರ ನೀಡುತ್ತಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.