ADVERTISEMENT

‘ಮೀಸಲಾತಿ ಹೆಚ್ಚಳ: ಬಿಜೆಪಿಗೆ ಸಮುದಾಯದ ಬೆಂಬಲ’

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 6:29 IST
Last Updated 28 ಮಾರ್ಚ್ 2023, 6:29 IST

ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಒಬಿಸಿ ಮೀಸಲಾತಿ ಹೆಚ್ಚಳ, ಒಳಮೀಸಲಾತಿ ಕಲ್ಪಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳ ಬಹುಕಾಲದ ಬೇಡಿಕೆ ಈಡೇರಿಸಿದೆ. ಮೀಸಲಾತಿ ಹೆಚ್ಚಳದಿಂದ ಈ ಸಮುದಾಯಗಳು ಖುಷಿಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಲಿವೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಹೇಳಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೀಸಲಾತಿ ಹೆಚ್ಚಳ ಹಾಗೂ ಒಳಮೀಸಲಾತಿ ನೀಡುವ ಮೂಲಕ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಈ ಹಿಂದಿನ ಕಾಂಗ್ರೆಸ್, ಜೆಡಿಎಸ್ ಸರ್ಕಾರಗಳು ಭರವಸೆ ಮಾತ್ರ ನೀಡಿದ್ದವು. ಬಿಜೆಪಿ ಸರ್ಕಾರ ಭರವಸೆಯನ್ನು ಈಡೇರಿಸಿದೆ’ ಎಂದರು.

ಮೀಸಲಾತಿ ಪಡೆದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ, ಶೈಕ್ಷಣಿಕ ಅವಕಾಶ ಕಲ್ಪಿಸಿದಂತಾಗಿದೆ. ರಾಜ್ಯ ಸರ್ಕಾರ 52 ಸಾವಿರ ಲಂಬಾಣಿ ಕುಟುಂಬಗಳಿಗೆ ಹಕ್ಕುಪತ್ರ ನೀಡಿದೆ. ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಉಚಿತ ವಿದ್ಯುತ್ ಕಲ್ಪಿಸಿದೆ ಎಂದರು.

ADVERTISEMENT

‘ವಿಧಾನಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ಬೂತ್ ಸಂಪರ್ಕ ಕಾರ್ಯ ನಡೆದಿದೆ. ಬೂತ್ ಮಟ್ಟದಿಂದ ಮಂಡಲ ಮಟ್ಟದವರೆಗೆ ಕಾರ್ಯಕರ್ತರು ಸಕ್ರಿಯರಾಗಿದ್ದು, ಚುನಾವಣೆ ದಿನಾಂಕ ಘೋಷಣೆಯನ್ನು ಎದುರು ನೋಡುತ್ತಿದ್ದೇವೆ. ಅಭಿವೃದ್ಧಿ, ರಾಷ್ಟ್ರೀಯ ವಿಚಾರಧಾರೆ, ಸಂಘಟನೆ ಹೆಸರಿನಲ್ಲಿ ಚುನಾವಣೆ ಎದುರಿಸುತ್ತೇವೆ. ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಸುಲಭ ಜಯ ಗಳಿಸುವ ವಿಶ್ವಾಸವಿದೆ’ ಎಂದು ಸುದರ್ಶನ ಹೇಳಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಕಣ್ಣೂರು, ವಕ್ತಾರರಾದ ರವಿಶಂಕರ ಮಿಜಾರ್, ಜಗದೀಶ ಶೇಣವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.