ಸುಹಾಸ್ ಶೆಟ್ಟಿ
ಮಂಗಳೂರು:ಹಿಂದುತ್ವಪರ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳ ತಂಡವು ಬಜಪೆಯ ಕಿನ್ನಿಪದವಿನಲ್ಲಿ ತಲವಾರಿನಿಂದ ಬರ್ಬರವಾಗಿ ಕೊಚ್ಚಿ ಗುರುವಾರ ಹತ್ಯೆ ಮಾಡಿದೆ.
ಬಜಪೆಯ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು.
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾದ ಬೆನ್ನಲ್ಲೇ ಸುರತ್ಕಲ್‌ನಲ್ಲಿ 2022ರ ಜುಲೈ 28ರಂದು ನಡೆದಿದ್ದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ. ಕಳೆದ ವರ್ಷ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
‘ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಹಾಗೂ ಶಶಾಂಕ್ ಜೊತೆ ತೆರಳುತ್ತಿದ್ದಾಗ ಐದಾರು ಮಂದಿ ದುಷ್ಕರ್ಮಿಗಳ ತಂಡ ಸ್ವಿಫ್ಟ್ ಕಾರು ಹಾಗೂ ಪಿಕಪ್ ವಾಹನದಲ್ಲಿ ಹಿಂಬಾಲಿಸಿತ್ತು. ಬಜಪೆ ಠಾಣೆ ವ್ಯಾಪ್ತಿಯ ಕಿನ್ನಿಪದವಿನಲ್ಲಿ ರಾತ್ರಿ 8.27ಕ್ಕೆ ಕಾರನ್ನು ಏಕಾಏಕಿ ಅಡ್ಡಗಟ್ಟಿ ಸುಹಾಸ್ ಶೆಟ್ಟಿ ಮೇಲೆ ಹಲ್ಲೆ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲೇ ಆತ ಅಸುನೀಗಿದ್ದ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಸುದ್ದಿಗಾರರಿಗೆ ತಿಳಿಸಿದರು.
‘ದಾಳಿಯ ವೇಳೆ ಸುಹಾಸ್ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದಾನೆ. ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಜಪೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದೇವೆ’ ಎಂದು ತಿಳಿಸಿದರು.
ಮೃತದೇಹ ಇರುವ ನಗರದ ಎ.ಜೆ.ಆಸ್ಪತ್ರೆಯ ಬಳಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಎ.ಜೆ.ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ತನಿಖೆ ಎನ್‌ಐಎಗೆ ವಹಿಸಿ:
‘ತಂಡವಾಗಿ ಬಂದು ಹಿಂದೂ ಕಾರ್ಯಕರ್ತನನ್ನು ನಿರ್ದಿಷ್ಟವಾಗಿ ಗುರುತಿಸಿ ಹತ್ಯೆ ಮಾಡಲಾಗಿದೆ. ಇದು ಪೂರ್ವಯೋಜಿತ ಕೃತ್ಯ. ಸರ್ಕಾರ ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಬೇಕು’ ಎಂದು ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದರು.
‘ಈ ರೀತಿಯಲ್ಲಿ ನಮ್ಮ ಕಾರ್ಯಕರ್ತರನ್ನು ಗುರಿಯಾಗಿಸಿ ಹತ್ಯೆ ಮಾಡುವುದು ಬಹಳ ವರ್ಷಗಳಿಂದ ನಡೆದಿದೆ. ಉತ್ತರ ಕೊಡಲು ನಾವು ಸಮರ್ಥರಿದ್ದೇವೆ’ ಎಂದರು.
‘ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಆಗಿದೆ. ರಾಜ್ಯದಲ್ಲಿ ಹಿಂದೂಗಳಿಗೆ ಉಳಿಗಾಲ ಇಲ್ಲದ ಸ್ಥಿತಿ ಇದೆ’ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು.
ಬಿಗಿ ಪೊಲೀಸ್ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ನಡೆದ ಬಳಿಕ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್‌ಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಲ್ಲಿ ಬ್ಯಾರಿಕೇಡ್‌ಗಳನ್ನು ಹಾಕುವ ಮೂಲಕ ಬಂದೋಬಸ್ತ್ ಮಾಡಲಾಗಿದೆ.
‘ಹೊರ ಜಿಲ್ಲೆಯ ಎಸ್‌ಪಿ ಹಾಗೂ ಹೆಚ್ಚುವರಿ ಎಸ್‌ಪಿ ದರ್ಜೆಯ ಅಧಿಕಾರಿಗಳನ್ನು ಕಳುಹಿಸುವಂತೆ ಮೇಲಧಿಕಾರಿಗಳನ್ನು ಕೋರಿದ್ದೇವೆ. ಇವತ್ತು ರಾತ್ರಿಯಿಂದಲೇ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದೇವೆ. ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಿ ನಾಕಾ ಬಂದಿಗೆ ವ್ಯವಸ್ಥೆ ಮಾಡಿದ್ದೇವೆ’ ಎಂದು ಪೊಲೀಸ್ ಕಮಿಷನರ್ ತಿಳಿಸಿದರು.
ಪ್ರತೀಕಾರದ ಹತ್ಯೆ?
ಕುಡುಪುವಿನಲ್ಲಿ ವಯನಾಡಿನ ಅಶ್ರಫ್ ಎಂಬಾತ ಗುಂಪು ಹಲ್ಲೆಗೆ ಒಳಗಾಗಿ ಹತ್ಯೆಗೀಡಾದ ಬೆನ್ನಲ್ಲೇ ಸುಹಾಸ್ ಶೆಟ್ಟಿ ಕೊಲೆ ನಡೆದಿದೆ. ಹಾಗಾಗಿ ಇದು ಪ್ರತೀಕಾರದ ಹತ್ಯೆ ಆಗಿರಬಹುದು ಎಂಬ ಚರ್ಚೆ ಎಲ್ಲೆಡೆ ನಡೆದಿದೆ.
ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಪೊಲೀಸ್ ಕಮಿಷನರ್, ‘ಇದನ್ನು ಪ್ರತೀಕಾರದ ಹತ್ಯೆ ಎಂದು ಈಗಲೇ ಹೇಳಲಾಗದು. ಕೊಲೆಯಾದ ಸ್ಥಳದಲ್ಲಿ ಸಿ.ಸಿ.ಟಿವಿ ಕ್ಯಾಮೆರಾಗಳಲ್ಲಿ ದಾಖಲಾದ ವಿಡಿಯೊ ದೃಶ್ಯ ಸಂಗ್ರಹಿಸುತ್ತಿದ್ದೇವೆ. ಅವುಗಳನ್ನು ನೋಡಿ, ಆರೋಪಿಗಳ ಗುರುತು ಪತ್ತೆ ಹಚ್ಚಿದ ಬಳಿಕವಷ್ಟೇ ಇದು ಪ್ರತೀಕಾರದ ಹತ್ಯೆ ಹೌದೋ ಅಲ್ಲವೋ ಎಂದು ತಿಳಿಯಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.