
ಪುತ್ತೂರು (ದಕ್ಷಿಣ ಕನ್ನಡ): ತಾಲ್ಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20ರಂದು ದೀಪೋತ್ಸವದಲ್ಲಿ ದ್ವೇಷ ಭಾಷಣ ಮಾಡಿದ್ದ ಆರೋಪದ ಮೇಲೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬುಧವಾರ ನಿರೀಕ್ಷಣಾ ಜಾಮೀನು ದೊರೆತಿದೆ.
ನಿರೀಕ್ಷಣಾ ಜಾಮೀನು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಡಿ.5ರಂದು ಪೂರ್ಣಗೊಳಿಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು, ಬುಧವಾರ ಜಾಮೀನು ಮಂಜೂರು ಮಾಡಿದೆ.
ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರ್ಕಾರಿ ಅಭಿಯೋಜಕಿ ಜಯಂತಿ ಕೆ.ಭಟ್ ಆಕ್ಷೇಪಣೆ ಸಲ್ಲಿಸಿದ್ದರು. ಆಕ್ಷೇಪಣೆ ಪುರಸ್ಕರಿಸದ ನ್ಯಾಯಾಲಯ ಜಾಮೀನು ನೀಡಿದೆ. ಪ್ರಭಾಕರ ಭಟ್ ಅವರ ಪರವಾಗಿ ವಕೀಲ ಮಹೇಶ್ ಕಜೆ ಅವರು ವಾದ ಮಂಡಿಸಿದ್ದರು.
ಪ್ರಕರಣ ಸಂಬಂಧ ಪ್ರಾಸಿಕ್ಯೂಶನ್ ಜೊತೆ ಸೇರಿ ವಾದ ಮಂಡನೆಗೆ ಅವಕಾಶ ನೀಡುವಂತೆ ಕೋರಿ ಪ್ರಕರಣದ ದೂರುದಾರರಾದ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಲ್ಲಿಸಿದ್ದ ಅರ್ಜಿಗೆ ನ್ಯಾಯಾಲಯ ಅವಕಾಶ ನೀಡಿತ್ತು. ದೂರುದಾರರ ಪರವಾಗಿ ವಕೀಲ ಪಿ.ಕೆ. ಸತೀಶನ್ ಅವರೂ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.