ADVERTISEMENT

ಕೇರಳದಿಂದ ಬರುವವರಿಗೆ ಆರ್‌ಟಿಪಿಸಿಆರ್‌ ನೆಗೆಟಿವ್ ವರದಿ ಕಡ್ಡಾಯ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 15:46 IST
Last Updated 28 ಜೂನ್ 2021, 15:46 IST
ಕೇರಳದಿಂದ ಜಿಲ್ಲೆಗೆ ಬರುವವರಿಗೆ ಕಡ್ಡಾಯವಾಗಿ ತಪಾಸಣೆ ನಡೆಸಲಾಗುತ್ತಿದೆ
ಕೇರಳದಿಂದ ಜಿಲ್ಲೆಗೆ ಬರುವವರಿಗೆ ಕಡ್ಡಾಯವಾಗಿ ತಪಾಸಣೆ ನಡೆಸಲಾಗುತ್ತಿದೆ   

ಮಂಗಳೂರು: ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದ್ದು, ಕೇರಳದಿಂದ ಜಿಲ್ಲೆಗೆ ಬರುವವರಿಗೆ ಮಂಗಳವಾರ (ಜೂ.29)ದಿಂದ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ವಾಹನಗಳ ತಪಾಸಣೆ ನಡೆಸಿದ ಬಳಿಕ ಈ ಮಾಹಿತಿ ನೀಡಿದ ಅವರು, ಸೋಮವಾರ ಯಾವುದೇ ಕಟ್ಟುನಿಟ್ಟು ಮಾಡಿಲ್ಲ. ಆದರೆ, ಮಂಗಳವಾರದಿಂದ ಕಡ್ಡಾಯ ಮಾಡಲಾಗಿದೆ ಎಂದರು.

ಕೇರಳ ಗಡಿ ಭಾಗದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿದ್ದು, ಡೆಲ್ಟಾ ವೇರಿಯಂಟ್ ಪತ್ತೆಯಾಗಿರುವ ಸಂಶಯದ ಮೇರೆಗೆ ಕೇರಳ ಗಡಿಯನ್ನು ಹಂಚಿಕೊಳ್ಳುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ ಎಂದರು.

ADVERTISEMENT

ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟು ನಿಟ್ಟಿನ ಕ್ರಮ ವಹಿಸಲಾಗಿದೆ. ತಲಪಾಡಿ, ನೆಟ್ಟಣಿಗೆ ಮುಡ್ನೂರು, ಸಾರಡ್ಕ, ಜಾಲ್ಸೂರಿನಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸಂಚಾರ ಹೆಚ್ಚಿರುವಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕಲು ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸುವವರು ಕಡ್ಡಾಯವಾಗಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಬರಬೇಕು. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ನಡುವೆ ಹಲವಾರು ರೋಗಿಗಳು ಬಂದು ಹೋಗುವುದರಿಂದ ಆಸ್ಪತ್ರೆಗಳಲ್ಲಿ ಆರ್‌ಟಿಪಿಸಿಎಸ್ ಪರೀಕ್ಷೆ ಮಾಡಿಸಬೇಕು ಎಂದು ತಿಳಿಸಿದರು.

ಗಡಿ ಭಾಗದಲ್ಲಿ ಓಡಾಡುವರ ತಪಾಸಣೆ ಮಾಡಲು ಚೆಕ್‌ಪೋಸ್ಟ್‌ಗಳಲ್ಲಿಯೂ ಗಂಟಲು ದ್ರವ ಸಂಗ್ರಹ ಕೇಂದ್ರವನ್ನೂ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯವರು ಕಾಸರಗೋಡು ಸೇರಿದಂತೆ ಬೇರೆಡೆ ಓಡಾಡುತ್ತಿದ್ದರೆ, ಅಲ್ಲಿಂದ ಬರುವಾಗ ಕಡ್ಡಾಯವಾಗಿ ಆರ್‌ಟಿಪಿಸಿಆರ್ ವರದಿಯನ್ನು ತರಬೇಕಾಗುತ್ತದೆ. ಹಾಗಾಗಿ ಅನಗತ್ಯ ಸಂಚಾರವನ್ನು ನಿಲ್ಲಿಸಬೇಕು ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ 5ರೊಳಗಿದೆ. ಇದೀಗ 3ನೇ ಅಲೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗುತ್ತಿದ್ದು, ಗಡಿ ಭಾಗದಲ್ಲಿ ತೀವ್ರ ನಿಗಾ ವಹಿಸಲು ಪೊಲೀಸರು ಹಾಗೂ ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.