ADVERTISEMENT

ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಸತೀಶ್ ಎಂ. ಪ್ರಭು ನಿಧನ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2026, 11:36 IST
Last Updated 3 ಮಾರ್ಚ್ 2026, 11:36 IST
   

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ವಕ್ತಾರ, ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸತೀಶ್ ಎಂ.ಪ್ರಭು (60 ವರ್ಷ) ಮಂಗಳವಾರ ನಿಧನರಾದರು.

ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮಿದುಳಿನಲ್ಲಿ ರಕ್ತಸ್ರಾವ ಆಗಿದೆ ಎಂದು ವೈದ್ಯರು ತಿಳಿಸಿದ್ದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾದ ಅವರು, ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್‌ ಹಾಗೂ ಬಿಜೆಪಿ ಯುವ ಮೋರ್ಚಾಗಳಲ್ಲೂ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ಬಿಜೆಪಿಯ ಮಂಗಳೂರು ನಗರ ದಕ್ಷಿಣ ಮಂಡಲದ ಮಾಜಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮುಖಂಡರ ಜೊತೆಗಿನ ಮುನಿಸಿನಿಂದಾಗಿ ಪಕ್ಷವನ್ನು ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಬಳಿಕ ಮತ್ತೆ ಬಿಜೆಪಿಗೆ ಮರಳಿದ್ದರು. ಮಣ್ಣಗುಡ್ಡೆಯ ಸಂಘನಿಕೇತನದ ಕೇಶವ ಸಂವರ್ಧನ ಸಮಿತಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಸೇರಿದಂತೆ ಹತ್ತು ಹಲವು ಸಂಘ ಸಂಸ್ಥೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದರು. ಕುದ್ರೋಳಿಯಲ್ಲಿ ಮುದ್ರಣ ಸಂಸ್ಥೆಯನ್ನು ನಡೆಸುತ್ತಿದ್ದರು. ಅವರಿಗೆ ತಾಯಿ, ಸಹೋದರರು, ಪತ್ನಿ ಮತ್ತು ಪುತ್ರ ಇದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.