ADVERTISEMENT

ಎಸ್‌ಸಿಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಅಂತಿಮ ಗಡುವು

​ಪ್ರಜಾವಾಣಿ ವಾರ್ತೆ
Published 2 ಜುಲೈ 2022, 15:08 IST
Last Updated 2 ಜುಲೈ 2022, 15:08 IST
ಪತ್ರಿಕಾಗೋಷ್ಠಿಯಲ್ಲಿ ಲೋಲಾಕ್ಷ ಮಾತನಾಡಿದರು. ಮೋಹನಾಂಗಯ್ಯ ಸ್ವಾಮಿ, ಜನಾರ್ದನ ಚಂಡ್ತಿಪಾರ್‌, ಪದ್ಮನಾಭ ಭಂಡಾರಿ ಮತ್ತು ಪದ್ಮನಾಭ ಮೂಡಬಿದರೆ ಇದ್ದಾರೆ
ಪತ್ರಿಕಾಗೋಷ್ಠಿಯಲ್ಲಿ ಲೋಲಾಕ್ಷ ಮಾತನಾಡಿದರು. ಮೋಹನಾಂಗಯ್ಯ ಸ್ವಾಮಿ, ಜನಾರ್ದನ ಚಂಡ್ತಿಪಾರ್‌, ಪದ್ಮನಾಭ ಭಂಡಾರಿ ಮತ್ತು ಪದ್ಮನಾಭ ಮೂಡಬಿದರೆ ಇದ್ದಾರೆ   

ಮಂಗಳೂರು: ರಾಜ್ಯದ ಎಸ್‌ಸಿ, ಎಸ್‌ಟಿ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕೆಂಬ ಬೇಡಿಕೆ ಈಡೇರಿಸಲು ಇದೇ 11ರ ವರೆಗೆ ಗಡುವು ನೀಡುತ್ತಿದ್ದು ಸ್ಪಂದಿಸದೇ ಇದ್ದರೆ 12ರಿಂದ ಭಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಸ್ವಾಭಿಮಾನಿ ಎಸ್‌ಸಿ ಎಸ್‌ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ.

ಮೀಸಲಾತಿಗೆ ಸಂಬಂಧಿಸಿ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್ ದಾಸ್ ಅವರು ವರದಿ ಸಲ್ಲಿಸಿ ಎರಡು ವರ್ಷಗಳು ಸಂದಿವೆ. ವರದಿಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಫೆಬ್ರುವರಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದಕ್ಕೆ ಸ್ಪಂದನೆ ಸಿಗಲಿಲ್ಲ ಎಂದು ಸಮತಾ ಸೈನಿಕ ದಳದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ದೂರಿದರು.

‘ವರದಿ ಜಾರಿಗೆ ಸರ್ಕಾರಕ್ಕೆ 10 ದಿನಗಳ ಗುಡುವು ನೀಡುತ್ತಿದ್ದೇವೆ. ಅಷ್ಟರಲ್ಲಿ ಸೂಕ್ತ ಉತ್ತರ ಸಿಗದೇ ಇದ್ದರೆ ರಾಜ್ಯದ ಎಲ್ಲ ಕಡೆಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗುವುದು. ವರದಿ ಜಾರಿಗೆ ಸಂಬಂಧಿಸಿ ಸಿದ್ದರಾಮಯ್ಯ ಮತ್ತು ಎಚ್‌.ಡಿ.ಕುಮಾರಸ್ವಾಮಿ ಅವರು ಬೆಂಬಲ ನೀಡಿದ್ದಾರೆ. ಸರ್ಕಾರ ನಮ್ಮ ಬೇಡಿಕೆಯನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಸೂಕ್ತ ಬೆಲೆ ತೆರಬೇಕಾಗುತ್ತದೆ’ ಎಂದು ಅವರು ಅಭಿಪ್ರಾಯಪಟ್ಟರು.

ADVERTISEMENT

ಪಾಣಾರ ಯಾನೆ ನಲಿಕೆ ಸಮಾಜ ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪದ್ಮನಾಭ ಮೂಡಬಿದರೆ, ಬಾಕುಡ ಸಮಾಜದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಪದ್ಮನಾಭ ನರಿಂಗಾನ ಮತ್ತು ಬಂಟ್ವಾಳ ಪುರಸಭೆಯ ಸದಸ್ಯ ಜನಾರ್ದನ ಚಂಡ್ತಿಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.