ಮಂಗಳೂರು: ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ಪ್ರಧಾನಿ ಜಾರಿಗೆ ತಂದಿರುವ ‘ಕೇಂದ್ರ ಪುರಸ್ಕೃತ ಹೊಸ ಯೋಜನೆಗಳು’ ಗ್ರಾಮಾಂತರ ಪ್ರದೇಶದ ಜನರ ಸ್ವಾವಲಂಬಿ ಬದುಕಿಗೆ ಆಧಾರವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನಬಾರ್ಡ್, ಲೀಡ್ ಬ್ಯಾಂಕ್ ಹಾಗೂ ತೋಟಗಾರಿಕಾ ಇಲಾಖೆ ಸಹಯೋಗದಲ್ಲಿ ಮಂಗಳವಾರ ಬ್ಯಾಂಕಿನಲ್ಲಿ ನಡೆದ ಕೃಷಿ ಮೂಲ ಸೌಕರ್ಯ ನಿಧಿ ಮತ್ತು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಹಣಕಾಸು ಸೌಲಭ್ಯಗಳ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಎಸ್‌ಸಿಡಿಸಿಸಿ ಬ್ಯಾಂಕ್ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿ, ತನ್ನ 105 ಶಾಖೆಗಳ ಮೂಲಕ ಆಹಾರ ಕೈಗಾರಿಕೆಯ ಕಿರು ಉದ್ದಿಮೆಗಳ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜಿಲ್ಲೆಯ ನವೋದಯ ಸ್ವ-ಸಹಾಯ ಸಂಘಗಳನ್ನು ತೊಡಗಿಸಿಕೊಂಡು ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಅವಕಾಶ ಕಲ್ಪಿಸಿದೆ ಎಂದು ವಿವರಿಸಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಚ್.ಆರ್. ನಾಯಕ್ ಮಾಹಿತಿ ನೀಡಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಬಾರ್ಡ್ ಡಿಡಿಎಂ ಸಂಗೀತಾ ಕರ್ತಾ, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಬ್ಯಾಂಕಿನ ನಿರ್ದೇಶಕರಾದ ಟಿ.ಜಿ. ರಾಜಾರಾಮ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ಸದಾಶಿವ ಉಳ್ಳಾಲ್, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರೀಶ್ಚಂದ್ರ, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ., ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್, ಮೀನುಗಾರಿಕೆ ಇಲಾಖೆಯ ಕಿರಿಯ ಸಹಾಯಕ ನಿರ್ದೇಶಕ ದಿಲೀಪ್ ಕುಮಾರ್ ಇದ್ದರು. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಬ್ಯಾಂಕಿನ ಮಹಾಪ್ರಬಂಧಕ ಗೋಪಿನಾಥ್ ಭಟ್ ಸ್ವಾಗತಿಸಿ, ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.