ADVERTISEMENT

ಪಾಲಿಕೆ ಆಯುಕ್ತರನ್ನೇ ಸ್ಮಾರ್ಟ್‌ಸಿಟಿಗೆ ನಿಯೋಜನೆ: ಹೈಕೋರ್ಟ್ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 3:17 IST
Last Updated 24 ಡಿಸೆಂಬರ್ 2020, 3:17 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಮಂಗಳೂರು ನಗರ ಪಾಲಿಕೆ ಆಯುಕ್ತರನ್ನು ಸ್ಮಾರ್ಟ್‌ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸುವ ಅಭ್ಯಾಸವನ್ನು ಮುಂದುವರಿಸಬೇಕೆ ಬೇಡವೇ ಎಂಬ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.‌‌‌

ಘನತ್ಯಾಜ್ಯ ವಿಲೇವಾರಿ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

‘ಸ್ಮಾರ್ಟ್‌ಸಿಟಿ ಲಿಮಿಟೆಡ್ ಅನ್ನು ಸರ್ಕಾರ ಸ್ಥಾಪಿಸಿದೆ. ಪಾಲಿಕೆ ಆಯುಕ್ತರನ್ನೇ ಈ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸ್ಥಾನದ ಉಸ್ತುವಾರಿ ನೀಡಿದರೆ ಅದು ಹಿತಾಸಕ್ತಿಯ ಸಂಘರ್ಷಕ್ಕೆ ಎಡೆಮಾಡಿಕೊಡುವ ಸಾಧ್ಯತೆಗಳಿವೆ. ಆಯುಕ್ತರೇ ವ್ಯವಸ್ಥಾಪಕ ನಿರ್ದೇಶಕರಾಗಿರುವ ಕಂಪನಿಯ ವಿರುದ್ಧ ಅವರೇ ಕ್ರಮ ಕೈಗೊಳ್ಳಲು ಸಾಧ್ಯವೇ’ ಎಂದು ಪ್ರಶ್ನಿಸಿದ ಪೀಠ, ಈ ಅಭ್ಯಾಸ ಮುಂದುವರಿಸಲು ಸರ್ಕಾರ ಬಯಸುತ್ತದೆಯೇ ಎಂಬುದರ ಬಗ್ಗೆ ಒಂದು ವಾರದಲ್ಲಿ ವಿವರ ಸಲ್ಲಿಸುವಂತೆ ತಿಳಿಸಿತು.

ADVERTISEMENT

‘ಸ್ಮಾರ್ಟ್‌ಸಿಟಿ ಕಾಮಗಾರಿ ನಿರ್ವಹಣೆ ವೇಳೆ ಕಟ್ಟಡ ನಿರ್ಮಾಣ ತ್ಯಾಜ್ಯ ವಿಲೇವಾರಿಯಲ್ಲಿ ನಿಯಮಗಳ ಪಾಲನೆ ಮಾಡದ ಗುತ್ತಿಗೆದಾರರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂಬುದನ್ನು ಸ್ಪಷ್ಟಪಡಿಸುವಂತೆ ವಿಚಾರಣೆ ವೇಳೆ ಹಾಜರಿದ್ದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ಪೀಠ ಪ್ರಶ್ನೆ ಮಾಡಿತು. ‘ನಿಯಮ ಉಲ್ಲಂಘಿಸುವ ಗುತ್ತಿಗೆದಾರರಿಗೆ ಕಾಮಗಾರಿ ಸ್ಥಗಿತಗೊಳಿಸುವಂತೆ ತಿಳಿಸಲಾಗಿದೆ’ ಎಂದು ಆಯುಕ್ತರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.