ADVERTISEMENT

‘ಕೋವಿಡ್‌ ನಿಯಂತ್ರಣದಲ್ಲಿ ಮಹತ್ತರ ಪಾತ್ರ’

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 4:04 IST
Last Updated 2 ಜನವರಿ 2021, 4:04 IST
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಸದ ನಳಿನ್‌ಕುಮಾರ್ ಕಟೀಲ್‌, ಸ್ಮಾರ್ಟ್‌ಫೋನ್‌ ವಿತರಿಸಿದರು.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಸದ ನಳಿನ್‌ಕುಮಾರ್ ಕಟೀಲ್‌, ಸ್ಮಾರ್ಟ್‌ಫೋನ್‌ ವಿತರಿಸಿದರು.   

ಮಂಗಳೂರು: ಕೋವಿಡ್-19 ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರು ಜೀವದ ಹಂಗು ತೊರೆದು, ಕೊರೊನಾ ನಿಯಂತ್ರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್‌ಫೋನ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೋಷಣ್‌ ಅಭಿಯಾನವು ಕುಂಠಿತ ಬೆಳವಣಿಗೆ, ಅಪೌಷ್ಟಿಕತೆ, ರಕ್ತಹೀನತೆ, ಕಡಿಮೆ ತೂಕದ ಮಕ್ಕಳ ಜನನವನ್ನು ಕಡಿಮೆಗೊಳಿಸಲು ಆರಂಭಿಸಲಾಗಿದೆ. ಈ ಯೋಜನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 2018 ರ ಮಾರ್ಚ್ 8ರಂದು ಚಾಲನೆ ನೀಡಿದ್ದರು ಎಂದು ಹೇಳಿದರು.

ADVERTISEMENT

ಕೇಂದ್ರ ಸರ್ಕಾರದ ಪೋಷಣ್‌ ಅಭಿಯಾನವನ್ನು ಮೊದಲ ಹಂತದಲ್ಲಿ 315 ಜಿಲ್ಲೆಗಳಲ್ಲಿ ಹಾಗೂ ಎರಡನೇ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಒಳಗೊಂಡಂತೆ 235 ಜಿಲ್ಲೆಗಳಲ್ಲಿ 2020 ರ ಜನವರಿಯಿಂದ ಅನುಷ್ಠಾನಗೊಳಿಸಲಾಗಿದೆ ಎಂದರು.

ಪೋಷಣ್‌ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ, ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ನಿತ್ಯದ ಚಟುವಟಿಕೆಗಳನ್ನು ಆನ್‌ಲೈನ್ ಮೂಲಕ ದಾಖಲಿಸಲು ಸ್ಮಾರ್ಟ್‌ಫೋನ್ ಅಗತ್ಯವಾಗಿದೆ. ಯೋಜನೆಯಡಿ ಸ್ಮಾರ್ಟ್ ಫೋನ್‌ಗಳನ್ನು ನೀಡಿರುವುದು ಸಂತಸದ ಸಂಗತಿ. ಇದನ್ನು ದೈನಂದಿನ ಕಚೇರಿ ಕೆಲಸಗಳಿಗೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದಲ್ಲಿ 2018 ರ ಜನವರಿಯಲ್ಲಿ ನದಿಯಲ್ಲಿ ಕಾಲು ಜಾರಿ ಮೃತಪಟ್ಟ ಒಂದೇ ಕುಟುಂಬದ ಇಬ್ಬರು ಮಕ್ಕಳ ಪೋಷಕರಿಗೆ ₹ 1 ಲಕ್ಷ ಪರಿಹಾರಧನದ ಚೆಕ್ ಅನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ ವಿತರಿಸಿದರು.

ಶಾಸಕ ಉಮಾನಾಥ ಕೋಟ್ಯಾನ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ಮೋನು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಾಪ ಬೋವಿ, ಜಿಲ್ಲಾ ನಿರೂಪಣಾಧಿಕಾರಿ ಶ್ಯಾಮಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.