ADVERTISEMENT

ನಿವೇಶನ ರಹಿತರ ಸಮೀಕ್ಷೆಗೆ ಸೂಚನೆ: ಕೋಟ ಶ್ರೀನಿವಾಸ ಪೂಜಾರಿ

ಸಮಾಜ ಕಲ್ಯಾಣ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 30 ಮೇ 2022, 12:57 IST
Last Updated 30 ಮೇ 2022, 12:57 IST
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ   

ಮಂಗಳೂರು: ಪರಿಶಿಷ್ಟ ಜಾತಿಯ 28 ಲಕ್ಷ ಕುಟುಂಬಗಳ ಪೈಕಿ ಹಲವರು ನಿವೇಶನ ವಂಚಿತರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಲವು ಮಂದಿ ನಿವೇಶನ ವಂಚಿತರಿದ್ದು, ಈ ಕುರಿತು ಸಮೀಕ್ಷೆ ನಡೆಸಬೇಕು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಸೋಮವಾರ ಇಲ್ಲಿ ನಡೆದ ಇಲಾಖೆಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ಪರಿಶಿಷ್ಟ ಸಮುದಾಯಗಳ ಎಷ್ಟು ಕುಟುಂಬಗಳು ನಿವೇಶನ ವಂಚಿತವಾಗಿವೆ ಎಂಬ ಬಗ್ಗೆ ಸಮೀಕ್ಷೆ ನಡೆಸಿ, ವಾರದ ಒಳಗೆ ವರದಿ ಸಲ್ಲಿಸಬೇಕು ಎಂದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಡಿ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ಜಿಲ್ಲೆಯಲ್ಲಿ ಯೋಜನೆಗಳ ಅನುಷ್ಠಾನ ವಿಳಂಬ ಆಗುತ್ತಿದ್ದು, ಮುಂದೆ ಇದಕ್ಕೆ ಅವಕಾಶ ನೀಡಬಾರದು. ಅಧಿಕಾರಿಗಳು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ADVERTISEMENT

ಮುಖ್ಯಮಂತ್ರಿ ಈಗಾಗಲೇ ಘೋಷಿಸಿದಂತೆ ಬಿಪಿಎಲ್ ಕಾರ್ಡ್‌ ಹೊಂದಿರುವ 24,5 ಲಕ್ಷ ಮಂದಿಗೆ 75 ಯುನಿಟ್ ವಿದ್ಯುತ್ ಉಚಿತವಾಗಿ ದೊರೆಯಲಿದೆ. ಇದರಿಂದ ಇಲಾಖೆಗೆ ₹ 640 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ. ಬಡವರ ಆರ್ಥಿಕ ಮತ್ತು ಶೈಕ್ಷಣಿಕ ಸ್ವಾವಲಂಬನೆಯ ಹಿತದೃಷ್ಟಿಯಿಂದ ಜಾರಿಯಾಗಿರುವ ಈ ಮಹತ್ವಾಕಾಂಕ್ಷಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲೆಯ ಅಧಿಕಾರಿಗಳು ವಿಶೇಷ ಒತ್ತು ನೀಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ಯಶಸ್ವಿನಿ ಯೋಜನೆಯಡಿ ತರುವಬ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಸಚಿವರು ಸೂಚಿಸಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಸಮುದಾಯದಲ್ಲಿ ಒಳನಾಡು ಮತ್ತು ಸಾಂಪ್ರದಾಯಿಕ ಮೀನುಗಾರಿಕೆ ನಡೆಸುವವರು ಎಷ್ಟು ಜನರಿದ್ದಾರೆ ಎಂಬ ಬಗ್ಗೆ ಸಮೀಕ್ಷೆ ನಡೆಯಬೇಕು. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 100 ಮಂದಿ ಮೀನುಗಾರರಿಗೆ ಇಲಾಖಾ ವತಿಯಿಂದ ದ್ವಿಚಕ್ರ ವಾಹನ ಒದಗಿಸುವ ಸೌಲಭ್ಯವಿದ್ದು, ಈ ನಿಟ್ಟಿನಲ್ಲಿ ಅರ್ಹರನ್ನು ಗುರುತಿಸಬೇಕು ಎಂದು ಸಚಿವರು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ಅಂಗನವಾಡಿಯಿಂದ ಹೊರಗುಳಿಯದಂತೆ ಎಚ್ಚರವಹಿಸಬೇಕು. ಜಿಲ್ಲೆಯಲ್ಲಿ ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, ಸ್ವಂತ ಕಟ್ಟಡಕ್ಕಾಗಿ ಜಾಗ ಗುರುತಿಸಬೇಕು. ಇಲಾಖೆ ನೆರವು ನೀಡಲು ಸಿದ್ಧವಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಆಕಾಶ್ ಕುಮಾರ್ ತಿಳಿಸಿದರು. ಜಿಲ್ಲೆಯಲ್ಲಿ 52 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಅಧಿಕಾರಿ ಮಾಹಿತಿ ನೀಡಿದರು.

ಉಪಮೇಯರ್ ಸುಮಂಗಳಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಆಯುಕ್ತ ಕೆ.ಎ.ದಯಾನಂದ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಕೆ. ಕೃಷ್ಣಮೂರ್ತಿ ಇದ್ದರು.

‘ತಂಡದೊಂದಿಗೆ ಕೇರಳಕ್ಕೆ ಭೇಟಿ’
ಬಿಪಿಎಲ್ ಕಾರ್ಡ್‌ದಾರರಿಗೆ ಕುಚ್ಚಲಕ್ಕಿ ವಿತರಣೆಗೆ ಸಿದ್ಧತೆಗಳು ನಡೆಯುತ್ತಿವೆ. ಕೇರಳದಲ್ಲಿ ಈಗಾಗಲೇ ಬಿಪಿಎಲ್ ಕಾರ್ಡುದಾರರಿಗೆ ಕುಚ್ಚಲಕ್ಕಿ ವಿತರಿಸಲಾಗುತ್ತಿದೆ. ಅಲ್ಲಿ ಯಾವ ರೀತಿ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂಬುದನ್ನು ತಿಳಿಯಲು ಆಹಾರ ಇಲಾಖೆ ಉಪನಿರ್ದೇಶಕರ ತಂಡದೊಂದಿಗೆ ಕೇರಳಕ್ಕೆ ಭೇಟಿ ನೀಡಲಾಗುವುದು. ನಂತರ ಇಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.