ADVERTISEMENT

ಪ್ರತಿ ಕೊಠಡಿಯಲ್ಲಿ 20 ವಿದ್ಯಾರ್ಥಿಗಳು

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2020, 16:27 IST
Last Updated 5 ಜೂನ್ 2020, 16:27 IST
ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌
ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌   

ಮಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇದೇ 25 ರಿಂದ ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30,835 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ತೋರಿಸಿ ಬಸ್‌ನಲ್ಲಿ ಪ್ರಯಾಣಿಸಬಹುದು. ಜುಲೈ 4 ರವರೆಗೆ ಪರೀಕ್ಷೆಗಳು ನಡೆಯಲಿದೆ ಎಂದರು.

ಜಿಲ್ಲೆಯಲ್ಲಿ 95 ಪರೀಕ್ಷೆ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಹೆಚ್ಚುವರಿಯಾಗಿ 19 ಪರೀಕ್ಷೆ ಕೇಂದ್ರಗಳು ಕಾಯ್ದಿರಿಸಲಾಗಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಪ್ರತಿ ಕೊಠಡಿಗೆ 20 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.

ADVERTISEMENT

ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮುನ್ನ ಥರ್ಮಲ್ ಸ್ಕ್ರೀನಿಂಗ್‌ ಮೂಲಕ ಪರೀಕ್ಷಿಸಲಾಗುತ್ತದೆ. ರೋಗದ ಯಾವುದೇ ಲಕ್ಷಣ ಕಂಡು ಬಂದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 102 ವಿಶ್ರಾಂತಿ ಕೊಠಡಿ ಸಿದ್ಧಪಡಿಸಲಾಗುವುದು. ಪರೀಕ್ಷೆ ಕೊಠಡಿಗಳು ಸಂಪೂರ್ಣವಾಗಿ ಸ್ಯಾನಿಟೈಸ್‌ ಆಗಬೇಕು ಎಂದು ಸೂಚಿಸಿದರು.

ವಿದ್ಯಾರ್ಥಿಗಳಿಗೆ ಸ್ಕೌಟ್ ಮತ್ತು ಗೈಡ್ ಸಂಸ್ಥೆ ಹಾಗೂ ಜಿ. ಶಂಕರ್ ಕುಟುಂಬದ ವತಿಯಿಂದ ಉಚಿತ ಮಾಸ್ಕ್ ನೀಡಲಾಗುತ್ತಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ 4 ಜನ ಸ್ಕೌಟ್ ಶಿಕ್ಷಕರು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದರು.

ಕಾಸರಗೋಡಿನ ಒಟ್ಟು 345 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದು, ಇವರು ಹಾಲ್ ಟಿಕೆಟ್‌ ತೋರಿಸಿ ಗಡಿಯಲ್ಲಿ ಪ್ರವೇಶಿಸಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.

ದ್ವಿತೀಯ ಪಿಯುಸಿ: ದ್ವಿತೀಯ ಪಿ.ಯು.ಸಿ. ಇಂಗ್ಲಿಷ್ ಪರೀಕ್ಷೆ ಇದೇ 18 ರಂದು ನಡೆಯಲಿದ್ದು, ಜಿಲ್ಲೆಯಲ್ಲಿ 26,704 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. 51 ಪರೀಕ್ಷೆ ಕೇಂದ್ರಗಳನ್ನು ಗುರುತಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಅಗತ್ಯವಾದ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿ ಸೂಚಿಸಿದರು.

ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆ ಭದ್ರತೆಯಲ್ಲಿಡಲಾಗುವುದು. ಪ್ರಶ್ನೆಪತ್ರಿಕೆಯನ್ನು ಸಾಗಣೆ ಮಾಡುವ ವಾಹನಕ್ಕೆ ಪೊಲೀಸ್ ಬೆಂಗಾವಲು ಒದಗಿಸಲಾಗುವುದು. ಜಿಲ್ಲಾ ಮತ್ತು ತಾಲ್ಲೂಕು ಹಂತದ ಅಧಿಕಾರಿಗಳನ್ನು ವೀಕ್ಷಕರಾಗಿ ಕಾರ್ಯನಿರ್ವಹಿಸಬೇಕು. ಪರೀಕ್ಷೆಗೆ ಸಂಬಂಧಿಸಿ
ದಂತೆ ಯಾವುದೇ ಲೋಪ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಡಿಸಿಪಿ ಅರುಣಾಂಗ್ಷು ಗಿರಿ, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.