ADVERTISEMENT

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಹಾಜರಾತಿ: ದಕ್ಷಿಣ ಕನ್ನಡ ಜಿಲ್ಲೆಗೆ ಅಗ್ರಸ್ಥಾನ

ಶೇ 80 ರಷ್ಟು ಮಕ್ಕಳು ತರಗತಿಗೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 1:40 IST
Last Updated 28 ಜನವರಿ 2021, 1:40 IST
ಮಂಗಳೂರಿನ ಡೊಂಗರಕೇರಿಯ ಕೆನರಾ ಹೈಸ್ಕೂಲ್‌ನಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಬರುತ್ತಿರುವುದು.
ಮಂಗಳೂರಿನ ಡೊಂಗರಕೇರಿಯ ಕೆನರಾ ಹೈಸ್ಕೂಲ್‌ನಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಬರುತ್ತಿರುವುದು.   

ಮಂಗಳೂರು: ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನವರಿ ಮೂರನೇ ವಾರದಲ್ಲಿ ಶೇ 80ಕ್ಕೆ ತಲುಪಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಆಫ್‌ಲೈನ್‌ ತರಗತಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 33 ಸಾವಿರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿದ್ದು, ಅವರು ತರಗತಿಗಳಿಗೆ ಹಾಜರಾಗುವ ನಿಟ್ಟಿನಲ್ಲಿ ಇಲಾಖೆಯಿಂದ ಪ್ರಯತ್ನಗಳು ಸಾಗಿವೆ. ಇದರ ಫಲವಾಗಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ಪಾಲಕರೂ ಆನ್‌ಲೈನ್‌ಗಿಂತ ಆಫ್‌ಲೈನ್‌ನಲ್ಲಿಯೇ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಆಗುತ್ತಿದೆ ಎನ್ನುವ ಅಭಿಪ್ರಾಯವನ್ನು ಹೊಂದಿದ್ದಾರೆ.

‘ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಹಾಜರಾತಿಯ ವಿಷಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದು, ಫೆಬ್ರುವರಿ 1 ರಿಂದ ಜಾರಿಗೊಳಿಸಲು ನಿರ್ಧರಿಸಲಾಗಿದೆ’ ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ.

ADVERTISEMENT

‘ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಖುದ್ದಾಗಿ ಮಕ್ಕಳ ಮನೆಗಳಿಗೆ ಭೇಟಿ ನೀಡಲಿದ್ದು, ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಹಿಂದೇಟು ಹಾಕುತ್ತಿರುವುದು ಏಕೆ ಎನ್ನುವ ಮಾಹಿತಿ ಪಡೆಯಲಿದ್ದಾರೆ. ಜೊತೆಗೆ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಮನವರಿಕೆ ಮಾಡಿಕೊಡಲಿದ್ದಾರೆ. ಈ ಮಾಹಿತಿಯಿಂದ ಶಿಕ್ಷಣ ಇಲಾಖೆಗೂ ಅನುಕೂಲ ಆಗಲಿದೆ’ ಎಂದು ತಿಳಿಸಿದ್ದಾರೆ.

‘ಬಹುತೇಕ ಸ್ಥಳೀಯ ವಿದ್ಯಾರ್ಥಿಗಳು ತರಗತಿಗಳಿಗೆ ಮರಳುತ್ತಿದ್ದಾರೆ. ಉತ್ತರ ಕರ್ನಾಟಕದ ಕೆಲ ವಿದ್ಯಾರ್ಥಿಗಳು ತಮ್ಮ ಸ್ವಂತ ಊರುಗಳಿಗೆ ತೆರಳಿದ್ದು, ಇಲ್ಲಿಗೆ ಮರಳಲು ಸಾಧ್ಯವಾಗಿಲ್ಲ. ಇಂತಹ ವಿದ್ಯಾರ್ಥಿಗಳನ್ನೂ ಸಂಪರ್ಕಿಸುವ ಪ್ರಯತ್ನ ಮಾಡಲಾಗುತ್ತಿದೆ. ಅಲ್ಲದೇ ಇಂತಹ ವಿದ್ಯಾರ್ಥಿಗಳು ತಮ್ಮ ಸಮೀಪದ ಶಾಲೆಗಳಲ್ಲಿಯೇ ತರಗತಿಗಳಿಗೆ ಹಾಜರಾಗಲು ಸೂಚಿಸಲಾಗುತ್ತಿದೆ. ಇಂತಹ ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಬಹುದು’ ಎಂದು ಹೇಳಿದ್ದಾರೆ.

‘ಆನ್‌ಲೈನ್‌ ತರಗತಿಯಲ್ಲಿ ಮಕ್ಕಳು ಗಮನ ನೀಡುವುದು ಅಷ್ಟಕ್ಕಷ್ಟೆ. ತರಗತಿಗಳಲ್ಲಿ ಶಿಕ್ಷಕರು ಇರುವುದರಿಂದ ಮಕ್ಕಳಿಗೆ ಬೋಧನೆಯೂ ಅರ್ಥವಾಗಲಿದೆ. ಅಲ್ಲದೇ ಮಕ್ಕಳ ಗಮನವಿಟ್ಟು ಪಾಠ ಕೇಳಲು ಸಾಧ್ಯವಾಗಲಿದೆ’ ಎಂದು ವಿದ್ಯಾರ್ಥಿಯ ಪಾಲಕರೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.