ADVERTISEMENT

ನೀತಿ ಸಂಹಿತೆ ಉಲ್ಲಂಘನೆ, ಕಟ್ಟುನಿಟ್ಟಿನ ಕ್ರಮ: ಕೆಂಪೇಗೌಡ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 16:29 IST
Last Updated 31 ಮಾರ್ಚ್ 2023, 16:29 IST

ಮಂಗಳೂರು: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಭಾಷಣಗಳಲ್ಲಿ ಜಾತಿ, ಧರ್ಮ ನಿಂದನೆಗೆ ಅವಕಾಶವಿಲ್ಲ. ಇಂತಹ ಯಾವುದೇ ಘಟನೆ ಕಂಡುಬಂದಲ್ಲಿ ಮುಲಾಜಿಲ್ಲದೆ ಪ್ರಕರಣ ದಾಖಲಿಸಲಾಗುವುದು. ಸಾರ್ವಜನಿಕರು ಕೂಡ ದೂರು ನೀಡಲು ಅವಕಾಶವಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 23 ಸೆಕ್ಟರ್ ಅಧಿಕಾರಿಗಳ ತಂಡ, ಒಂಬತ್ತು ಫ್ಲೈಯಿಂಗ್ ಸ್ಕ್ವಾಡ್‌ ತಂಡ, ಮೂರು ಎಸ್‌ಎಸ್‌ಟಿ ತಂಡಗಳು ಕಾರ್ಯನಿರ್ವಹಿಸುತ್ತಿವೆ. ನೀತಿ ಸಂಹಿತೆ ಇರುವುದರಿಂದ ಧಾರ್ಮಿಕ, ರಾಜಕೀಯ ಸೇರಿದಂತೆ ಯಾವುದೇ ಸಾರ್ವಜನಿಕ ಕಾರ್ಯಕ್ರಮ ನಡೆಸಲು ಅನುಮತಿ ಪಡೆದುಕೊಳ್ಳಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ‘ಸುವಿಧಾ’ ಪೋರ್ಟಲ್ ಪ್ರಾರಂಭಿಸಲಾಗಿದ್ದು, ಇಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಳ್ಳಬಹುದು’ ಎಂದರು.

ಕ್ಷೇತ್ರದಲ್ಲಿ ಈ ಹಿಂದಿನ ಚುನಾವಣೆಯಲ್ಲಿ 238 ಮತಗಟ್ಟೆಗಳು ಇದ್ದವು. ಈ ಬಾರಿ ಆರು ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 244 ಮತಗಟ್ಟೆಗಳು ಇವೆ. ವಿವಿಧ ಕಾರಣಗಳಿಂದ 11,158 ಜನರ ಹೆಸರು ಮತದಾರರ ಯಾದಿಯಿಂದ ಕಡಿಮೆಯಾಗಿದ್ದು, 13,487 ಜನರು ಹೊಸದಾಗಿ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.

ADVERTISEMENT

80 ವರ್ಷ ಮೇಲ್ಪಟ್ಟ ಮತದಾರರು 11,157 ಇದ್ದು, 537 ಅಂಗವಿಕಲ ಮತದಾರರು ಇದ್ದಾರೆ. ಇವರಿಗೆ ಮನೆಯಿಂದಲೇ ಮತ ಚಲಾಯಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವುದರಿಂದ ಪ್ರತಿಯೊಬ್ಬರ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಅವರಿಗೆ ಅರ್ಜಿ ನಮೂನೆ ಒದಗಿಸಿ, ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದರು.

ಪತ್ರಕರ್ತರಿಗೆ ಅಂಚೆ ಮತದಾನಕ್ಕೆ ಸಂಬಂಧಿಸಿ, ಈವರೆಗೆ ಯಾವುದೇ ನಿರ್ದೇಶನ ಬಂದಿಲ್ಲ. ಕಾಲಾವಕಾಶ ಇದ್ದು, ಇನ್ನು ಮುಂದೆ ಬರಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.