ಉಳ್ಳಾಲ: ಪಿಸ್ತೂಲ್ ಅಕ್ರಮವಾಗಿ ವಶದಲ್ಲಿರಿಸಿಕೊಂಡ ಆರೋಪಿಗಳಿಬ್ಬರನ್ನು ಸಿಸಿಬಿ ಪೊಲೀಸರು ತಲಪಾಡಿ ಗ್ರಾಮದ ಪಿಲಿಕೂರಿನಲ್ಲಿ ಬಂಧಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆರೆಯ ಕೇರಳ ರಾಜ್ಯದ ಮಂಜೇಶ್ವರ ಬಳಿಯ ಕಡಂಬಾರ್ ನಿವಾಸಿ ಮೊಹಮ್ಮದ್ ಅಸ್ಗರ್ (26) ಹಾಗೂ ಮೂಡಂಬೈಲ್ ನಿವಾಸಿ ಅಬ್ದುಲ್ ನಿಸಾರ್.ಕೆ (29) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.
‘ಉಳ್ಳಾಲ ತಾಲ್ಲೂಕಿನ ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಪಿಸ್ತೂಲ್ ಅನ್ನು ಅಕ್ರಮವಾಗಿ ಇರಿಸಿಕೊಂಡಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಬಂದಿತ್ತು. ಸ್ಥಳಕ್ಕೆ ತೆರಳಿ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಆರೋಪಿಗಳಿಂದ ಒಂದು ಪಿಸ್ತೂಲ್, ಎರಡು ಸಜೀವ ಮದ್ದುಗುಂಡುಗಳು, ಎರಡು ಮೊಬೈಲ್ ಫೋನುಗಳು ಹಾಗೂ ಕಪ್ಪು ಬಣ್ಣದ ಹುಂಡೈ ವೆರ್ನಾ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಿಂದ ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹ 7.15 ಲಕ್ಷ ಎಂದು ಅಂದಾಜಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.
ಈ ಹಿಂದೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ, ಅಪಹರಣ, ಹಲ್ಲೆ ಪ್ರಕರಣಗಳು ಮತ್ತು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದ್ದ ಗಾಂಜಾ ಮಾರಾಟ ಪ್ರಕರಣ ಹಾಗೂ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಗಾಂಜಾ ಸಾಗಾಟದ ಪ್ರಕರಣ ಸೇರಿ ಒಟ್ಟು 8 ಪ್ರಕರಣಗಳಲ್ಲಿ ಮೊಹಮ್ಮದ್ ಅಸ್ಗರ್ ಆರೋಪಿಯಾಗಿದ್ದ ಎಂದೂ ಅವರು ತಿಳಿಸಿದರು.
ಸಿಸಿಬಿಯ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ, ಇನ್‌ಸ್ಪೆಕ್ಟರ್ ಶ್ಯಾಮಸುಂದರ್ ಎಚ್.ಎಂ. ಹಾಗೂ ಪಿಎಸ್ಐ ಸುದೀಪ್ ಎಂ.ವಿ ಮತ್ತು ಸಿಸಿಬಿ ಸಿಬ್ಬಂದಿ ಈ ದಾಳಿಯನ್ನು ಸಂಘಟಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.