
ಉಜಿರೆ: ವಿದ್ಯಾರ್ಥಿಗಳಲ್ಲಿ ಕೌಶಲಾಭಿವೃದ್ಧಿಗಾಗಿ ಸರ್ಕಾರದಿಂದ ವಿಶೇಷ ಯೋಜನೆ ರೂಪಿಸಿದ್ದು, ಭಾಷಾ ಪ್ರಯೋಗಾಲಯ, ತಾಂತ್ರಿಕ ಶಿಕ್ಷಣದೊಂದಿಗೆ ಕೌಶಲಾಭಿವೃದ್ಧಿ, ಭಾಷಾ ಅಧ್ಯಯನಕ್ಕೆ ಒತ್ತು ನೀಡಿ ಪಠ್ಯಕ್ರಮದೊಂದಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.
ಉಜಿರೆ ಎಸ್‌ಡಿಎಂ (ಸ್ವಾಯತ್ತ) ಕಾಲೇಜಿನಲ್ಲಿ ಪದವೀಧರರಾದ 24 ಮಂದಿ, 22 ಮಂದಿ ಸ್ನಾತಕೋತ್ತರ ಪದವೀಧರರು, ರ‍್ಯಾಂಕ್‌ವಿಜೇತ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಶುಕ್ರವಾರ ಅವರು ಮಾತನಾಡಿದರು.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಮಧ್ಯೆ ಮಾಡಿಕೊಂಡಿರುವ ಒಪ್ಪಂದದಂತೆ ‘ದೀಪಿಕಾ’ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪಿಯು ಉತ್ತೀರ್ಣರಾದವರು ಯಾವುದೇ ಪದವಿ ತರಗತಿ, ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರಿಗೆ ಮೂರು ವರ್ಷಗಳವರೆಗೆ ವರ್ಷಕ್ಕೆ ₹ 30 ಸಾವಿರ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಅವರು ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಿಭಾಗದ ಉಪನಿರ್ದೇಶಕಿ ಡಾ.ಕವಿತಾ ಕೆ.ಆರ್. ಪ್ರತಿಜ್ಞಾವಿಧಿ ಬೋಧಿಸಿದರು.
ಅಧ್ಯಕ್ಷತೆ ವಹಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ, ನಿರ್ದಿಷ್ಟ ಗುರಿಯೊಂದಿಗೆ ದೃಢಸಂಕಲ್ಪ, ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳು ಅಧ್ಯಯನ ಮಾಡಿದರೆ ಉನ್ನತ ಪ್ರಗತಿ ಸಾಧ್ಯವಾಗುತ್ತದೆ ಎಂದರು.
ಸದ್ಯದಲ್ಲೇ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲಾಗುವುದು ಎಂದು ಅವರು ಪ್ರಕಟಿಸಿದರು.
ಕಾಲೇಜಿನ ಉಪ ಪ್ರಾಂಶುಪಾಲೆ ಪ್ರೊ.ನಂದಕುಮಾರಿ ಕಾಲೇಜಿನ ಪ್ರಗತಿ-ಸಾಧನೆಯ ವರದಿ ಮಂಡಿಸಿದರು.
ಮಂಗಳೂರು ವಿ.ವಿ.ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ದೇವೇಂದ್ರಪ್ಪ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎಸ್.ಸತೀಶ್ಚಂದ್ರ, ಸ್ನಾತಕೋತ್ತರ ವಿಭಾಗದ ಡೀನ್ ಸೌಮ್ಯಾ ಬಿ.ಪಿ., ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ವಿಶ್ವನಾಥ ಸ್ವಾಗತಿಸಿದರು. ಶ್ರೀಧರ ಭಟ್ ವಂದಿಸಿದರು. ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಪ್ರೊ.ನೆಫಿಸೆತ್ ಕಾರ್ಯಕ್ರಮ ನಿರ್ವಹಿಸಿದರು.
ಸಮಾರಂಭದ ಬಳಿಕ ಸಚಿವ ಡಾ.ಎಂ.ಸಿ.ಸುಧಾಕರ್ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.