ADVERTISEMENT

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 9:00 IST
Last Updated 14 ಫೆಬ್ರುವರಿ 2020, 9:00 IST
ವುಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧದ ಎದುರು ಗುರುವಾರ ಒಲೆ ಉರಿಸುವ ಅಣಕು ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಲಾಯಿತು.
ವುಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧದ ಎದುರು ಗುರುವಾರ ಒಲೆ ಉರಿಸುವ ಅಣಕು ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಲಾಯಿತು.   

ಮಂಗಳೂರು: ಅಡುಗೆ ಅನಿಲ ಸಿಲಿಂಡರ್‌ ಬೆಲೆ ಏರಿಕೆ, ಕಾನೂನಿನ ದುರುಪಯೋಗ ಮತ್ತು ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಖಂಡಿಸಿ ವುಮೆನ್ ಇಂಡಿಯಾ ಮೂವ್‌ಮೆಂಟ್ ಜಿಲ್ಲಾ ಸಮಿತಿಯ ವತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಗುರುವಾರ ಒಲೆ ಉರಿಸುವ ಅಣಕು ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಲಾಯಿತು.

ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಮಾತನಾಡಿ, ‘ಒಂದೇ ದಿನದಲ್ಲಿ ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್ ಗೆ ₹145.5 ಏರಿಕೆಯಾಗಿದ್ದು, ಜನಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಹಣದುಬ್ಬರ, ದಿನಬಳಕೆ ಸಾಮಗ್ರಿಗಳ ಬೆಲೆ ಏರಿಕೆ, ನಿರುದ್ಯೋಗಿಗಳಿಂದ ಈಗಾಗಲೇ ತತ್ತರಿಸುತ್ತಿರುವ ಜನತೆಗೆ, ಅನಿಲ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದ ಕೇಂದ್ರ ಸರ್ಕಾರವು ತಾನು ಜನಪರವಾಗಿಲ್ಲ ಎಂಬುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೀದರಿನ ಶಾಹೀನ್ ವಿದ್ಯಾ ಸಂಸ್ಥೆಯ ಶಾಲಾ ವಾರ್ಷಿಕೋತ್ಸವದಲ್ಲಿ ನಡೆದ ನಾಟಕದ ಒಂದು ದೃಶ್ಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಮತ್ತು ಶಾಲೆಯ ಮುಖ್ಯ ಶಿಕ್ಷಕಿಯ ವಿರುದ್ಧ ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ವಿದ್ಯಾರ್ಥಿಗಳನ್ನು ನಿರಂತರ 5-6 ದಿನ ಪೊಲೀಸರು ವಿಚಾರಣೆ ನಡೆಸಿರುವುದು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದರು.

ADVERTISEMENT

ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರೋಧಿಸಿ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಿಂದ ಸಂಸತ್ ಭವನಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಿದ ವಿದ್ಯಾರ್ಥಿಗಳು ಮತ್ತು ನಾಗರಿಕರ ಮೇಲೆ ದೆಹಲಿ ಪೊಲೀಸರು ಅತ್ಯಂತ ಕ್ರೂರವಾಗಿ ಲಾಠಿ ಪ್ರಹಾರ ನಡೆಸಿರುವುದು ಖಂಡನಾರ್ಹ ಎಂದು ಹೇಳಿದರು.

ಮಂಗಳೂರು ವಲಯ ಕಾರ್ಯದರ್ಶಿ ಮಿಸ್ರಿಯಾ ಕಣ್ಣೂರು, ಜಿಲ್ಲಾ ಸಮಿತಿ ಸದಸ್ಯೆಯರಾದ ಸಂಶಾದ್ ಕುಲಾಯಿ, ಸಫಿಯಾ, ಮರಿಯಂ ಉಪಸ್ಥಿತರಿದ್ದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.