ಮಂಗಳೂರು: ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಭಾರತ ದೇಶಕ್ಕೆ ಜನಸಂಖ್ಯೆ ದೊಡ್ಡ ಸಮಸ್ಯೆಯಾಗಿದೆ. ಜನಸಂಖ್ಯೆ ಹೆಚ್ಚಳದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಸೇಂಟ್ ಆಗ್ನೆಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ವೇಗವಾಗಿ ಹೆಚ್ಚುತ್ತಿರುವ ಜನಸಂಖ್ಯೆ, ಅದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ವಿಶ್ವದಲ್ಲಿ ದಿನೇ ದಿನೇ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಭಾರತ ವಿಶ್ವದ ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದರು.
ಕೆಎಂಸಿ ಕಮ್ಯುನಿಟಿ ಮೆಡಿಸಿನ್ ಮುಖ್ಯಸ್ಥ ಡಾ. ಪ್ರಸನ್ನ ಮಿತ್ರಾ ಪಿ ಮಾತನಾಡಿ, ಜನಸಂಖ್ಯೆ ಹೆಚ್ಚಳವು ಸಂಪನ್ಮೂಲಗಳು, ಉದ್ಯೋಗಾವಕಾಶಗಳ ಕೊರತೆ, ಬಡತನ ಮತ್ತು ನಿರುದ್ಯೋಗಕ್ಕೆ ಕಾರಣವಾಗುತ್ತಿದೆ. ಜನಸಂಖ್ಯೆ ಏರಿಕೆಯ ಕಾರಣ ಮತ್ತು ಅವುಗಳಿಂದ ಉಂಟಾಗುವ ಸಮಸ್ಯೆಯನ್ನು ಅರ್ಥಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದರು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುಜಯ್, ತಹಶೀಲ್ದಾರ್ ಪ್ರಶಾಂತ್ ವಿ. ಪಾಟೀಲ್, ಆಗ್ನೆಸ್ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಎಂ ವೆನಿಸ್ಸಾ ಎ.ಸಿ, ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ. ಕಾರಗಿ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ. ಸುದರ್ಶನ್, ಸುರತ್ಕಲ್ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ. ಕಿಶೋರ್ ಕುಮಾರ್ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಯೋಜನಾಧಿಕಾರಿ ಉದಯ್ ಕುಮಾರ್ ಬಿ ಸ್ವಾಗತಿಸಿದರು. ವಿದ್ಯಾರ್ಥಿನಿ ತಪಸ್ವಿ ನಿರೂಪಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ ಉಳೆಪಾಡಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.