ADVERTISEMENT

‘ತಾಕತ್‌ ಇದ್ದರೆ ವಿಧಾನಸಭೆ ವಿಸರ್ಜಿಸಿ’

ಕಾಂಗ್ರೆಸ್‌–ಜೆಡಿಎಸ್‌ ನಾಯಕರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಸವಾಲು

​ಪ್ರಜಾವಾಣಿ ವಾರ್ತೆ
Published 4 ಜೂನ್ 2018, 7:01 IST
Last Updated 4 ಜೂನ್ 2018, 7:01 IST

ದಾವಣಗೆರೆ: ‘104 ಕ್ಷೇತ್ರಗಳಲ್ಲಿ ಗೆದ್ದರೂ ಬಿಜೆಪಿಗೆ ಅಧಿಕಾರ ಹಿಡಿಯಲು ಆಗಲಿಲ್ಲ ಎಂಬ ಬೇಸರ ರಾಜ್ಯದ ಜನರಲ್ಲಿ ಮೂಡಿದೆ. ಅವಕಾಶವಾದಿ, ಅನುಕೂಲಸಿಂಧು ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್‌–ಜೆಡಿಎಸ್‌ ಮುಖಂಡರು ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಲಿ. ನಾವು 150 ಕ್ಷೇತ್ರ ಗೆದ್ದು ತೋರಿಸುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸವಾಲು ಹಾಕಿದರು.

ಇಲ್ಲಿನ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಪರ ಮತಯಾಚಿಸಿ ಅವರು ಮಾತನಾಡಿದರು.

‘ಚುನಾವಣೆ ನಂತರ ರಾಜ್ಯದಲ್ಲಿ ಆದ ರಾಜಕೀಯ ವ್ಯತ್ಯಾಸಗಳಿಂದಾಗಿ ಜನ ನೊಂದಿದ್ದಾರೆ. ನಿಮ್ಮೂರಿನ ಒಬ್ಬ ಆಟೊ ಚಾಲಕನನ್ನು ಬೇಕಾದರೂ ಕೇಳಿ. ಆತ, ಬಿಜೆಪಿಗೆ ಅಧಿಕಾರ ಸಿಗಬೇಕಿತ್ತು ಎನ್ನುತ್ತಾನೆ. ಇಂಥ ಭಾವನೆ ರಾಜ್ಯದ ಉದ್ದಗಲಕ್ಕೂ ಇದೆ. ಆಗಿರುವುದೆಲ್ಲಾ ಒಳ್ಳೆಯದೇ ಎಂದು ಭಾವಿಸಿದ್ದೇನೆ. ವಿರೋಧ ಪಕ್ಷದವರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತೇವೆ. ಮುಂದೆ ಅಧಿಕಾರ ಸಿಕ್ಕೇ ಸಿಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.