ADVERTISEMENT

ನೀರಿನ ಸಮಸ್ಯೆ ಬಗೆಹರಿಸಲು ತಾಕೀತು

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 6:28 IST
Last Updated 18 ಡಿಸೆಂಬರ್ 2013, 6:28 IST

ಜಗಳೂರು: ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿರುವ ಗ್ರಾಮಗಳಲ್ಲಿ ತಾಲ್ಲೂಕು ಆಡಳಿತ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಎಚ್. ರಾಜೇಶ್ ತಾಕೀತು ಮಾಡಿದರು.

ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಬರ ಪರಿಹಾರ ಕಾರ್ಯಕ್ರಮಗಳ ಪರಿಶೀಲನಾ ಸಭೆ’ಯ ಅಧ್ಯಕ್ಷತೆವಹಿಸಿ  ಅವರು ಮಾತನಾಡಿದರು. 

ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಾಲ್ಲೂಕನ್ನು ಬರಪೀಡಿತ ಎಂದು ಈಗಾಗಲೇ ಘೋಷಿಸಿದೆ. ತಾಲ್ಲೂಕಿನಲ್ಲಿ ಅಂತರ್ಜಲ ಕುಸಿತವಾಗಿದ್ದು, ಸಾರ್ವಜನಿಕ ಕುಡಿಯುವ ನೀರು ಪೂರೈಕೆಯ ಕೊಳವೆಬಾವಿಗಳು ವಿಫಲವಾಗುತ್ತಿವೆ. ಸಾಕಷ್ಟು ಆಳ ಕೊರೆಯಿಸಿದರೂ ನೀರು ಸಿಗುತ್ತಿಲ್ಲ. ಸಮಸ್ಯೆ ಇರುವ ಹಳ್ಳಿಗಳಲ್ಲಿ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಿ ಎಂದು ಅವರು  ಸೂಚಿಸಿದರು.

ಪಂಚಾಯ್ತಿ ಮಟ್ಟದ ಪಿಡಿಒ, ಕಾರ್ಯದರ್ಶಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕಾರ್ಯ ನಿರ್ವಹಿಸಬೇಕು. ಜನಸಾಮಾನ್ಯರಿಗೆ ಅಧಿಕಾರಿಗಳು ಸದಾ ಲಭ್ಯ ಇರಬೇಕು. ಜನರ ಅಹವಾಲುಗಳಿಗೆ ಸ್ಪಂದಿಸಬೇಕು ಎಂದು ಕಿವಿಮಾತು ಹೇಳಿದರು.
ಪಿಆರ್‌ಇಡಿ ಇಲಾಖೆಯ ಎಇಇ ಎನ್‌. ಲಿಂಗರಾಜ್‌ ಮಾತನಾಡಿ, ‘ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದ ಗ್ರಾಮಗಳಲ್ಲಿ ವಿಳಂಬವಿಲ್ಲದೇ ಕೊಳವೆಬಾವಿ ಕೊರೆಸಿ, ತುರ್ತು ಪೈಪ್‌ಲೈನ್‌ ಕಾಮಗಾರಿ ಕೈಗೊಂಡು ನೀರು ಪೂರೈಕೆ ಮಾಡಲಾಗಿದೆ. ಮುಂದಿನ ಬೇಸಗೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.

ಚನ್ನಗಿರಿ ತಾಲ್ಲೂಕಿನ ಸೂಳೆಕೆರೆಯಿಂದ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಮಾರ್ಗ ಮಧ್ಯೆ ಚಿತ್ರದುರ್ಗ ತಾಲ್ಲೂಕಿನ ಐದಾರು ಹಳ್ಳಿಗಳಲ್ಲಿ ಪೈಪ್‌ ಒಡೆದು ಅಕ್ರಮವಾಗಿ ನೀರಿನ ಬಳಕೆ ಮಾಡಲಾಗುತ್ತಿದೆ. ಇದರಿಂದ ಪಟ್ಟಣಕ್ಕೆ ಪ್ರತಿನಿತ್ಯ 14 ಲಕ್ಷ ಲೀಟರ್‌  ಬದಲು ಕೇವಲ 7 ಲಕ್ಷ ಲೀಟರ್‌ ನೀರು ಸರಬರಾಜು ಆಗುತ್ತಿದೆ. ಅರ್ಧದಷ್ಟು ನೀರು ಸೋರಿಕೆಯಾಗಿ ಸಮಸ್ಯೆಯಾಗಿದೆ ಎಂದು ಪ.ಪಂ. ಮುಖ್ಯಾಧಿಕಾರಿ ಜೆ.ಟಿ. ಹನುಮಂತರಾಜು ಸಭೆಯ ಗಮನಕ್ಕೆ ತಂದರು.

ಶಾಸಕ ರಾಜೇಶ್‌ ಪ್ರತಿಕ್ರಿಯಿಸಿ, ಇದು ಗಂಭೀರವಾದ ಸಮಸ್ಯೆಯಾಗಿದ್ದು, ಚಿತ್ರದುರ್ಗ ಜಿಲ್ಲಾಡಳಿತದ ಗಮನ ಸೆಳೆಯುವ ನಿಟ್ಟಿನಲ್ಲಿ ಪಟ್ಟಣದ ನಾಗರಿಕರು, ಪ.ಪಂ. ಸದಸ್ಯರನ್ನು ಒಳಗೊಂಡ ನಿಯೋಗದೊಂದಿಗೆ ಪಟ್ಟಣದಿಂದ  ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಗೆ ಶೀಘ್ರವೇ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಪ.ಪಂ. ಅಧ್ಯಕ್ಷ ಎಂ. ಮಂಜುನಾಥ್‌, ಉಪ ವಿಭಾಗಾಧಿಕಾರಿ ಲೋಕೇಶ್‌, ತಹಶೀಲ್ದಾರ್‌ ರೇಷ್ಮಾ ಹಾನಗಲ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.