ADVERTISEMENT

ಬೆಳಲಗೆರೆ ಶಾಲೆಗೆ ಶತಮಾನೋತ್ಸವ ಸಂಭ್ರಮ

ಕಟ್ಟಡಕ್ಕೆ ಶಂಕುಸ್ಥಾಪನೆ, ‘ಗುರುಶ್ರೀ’ ಪ್ರಶಸ್ತಿ ಪ್ರದಾನ ಇಂದು

ಎನ್.ವಿ.ರಮೇಶ್
Published 4 ಮಾರ್ಚ್ 2018, 10:20 IST
Last Updated 4 ಮಾರ್ಚ್ 2018, 10:20 IST
ಬಸವಾಪಟ್ಟಣದ ಬೆಳಲಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರು
ಬಸವಾಪಟ್ಟಣದ ಬೆಳಲಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರು   

ಬಸವಾಪಟ್ಟಣ: 1918ರ ಜೂನ್‌ನಲ್ಲಿ ಆರಂಭಗೊಂಡ ಬೆಳಲಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೂರು ವರ್ಷಗಳನ್ನು ಪೂರೈಸಿದ ನೆನಪಿಗಾಗಿ ಮಾರ್ಚ್‌ 4ರಂದು ಶತಮಾನೋತ್ಸವ ಸಮಾರಂಭ ಇಲ್ಲಿನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನಡೆಯಲಿದೆ.

ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್‌ ಸೇಠ್‌ ಅವರು ₹ 1 ಕೋಟಿ ವೆಚ್ಚದ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೆ.ಎಚ್‌.ಪಟೇಲ್‌ ವೇದಿಕೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಶಿವಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ‘ಬೆಳಲಗೆರೆ ಬೆಳಕು’ ಸ್ಮರಣ ಸಂಚಿಕೆಯನ್ನು ಸಂಸದ ಜಿ.ಎಂ.ಸಿದ್ದೇಶ್ವರ ಬಿಡುಗಡೆ ಮಾಡಲಿದ್ದಾರೆ.

ಹಲವು ಶಾಸಕರು, ಜಿಲ್ಲಾ ಪಂಚಾಯ್ತಿ ಅಧ್ಯಕ್ಷರು ಮತ್ತು ಸದಸ್ಯರು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಸದಸ್ಯರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಸೇರಿ ಜಿಲ್ಲೆಯ ವಿವಿಧ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ADVERTISEMENT

ಶಾಲಾ ಮಕ್ಕಳಿಂದ ನಾಡಗೀತೆ, ಸ್ವಾಗತಗೀತೆ, ಮನರಂಜನಾ ಕಾರ್ಯಕ್ರಮ, ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತಾಲ್ಲೂಕಿನ ಆರು ಹಿರಿಯ ಶಿಕ್ಷಕರಿಗೆ ‘ಗುರುಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಮಾರಂಭದಲ್ಲಿ ಸುಮಾರು 5,000 ಜನ ಭಾಗವಹಿಸುವ ನಿರೀಕ್ಷೆ ಇದೆ. ಎಲ್ಲರಿಗೂ ಭೋಜನ ವ್ಯವಸ್ಥೆ ಮಾಡಲಾಗಿದೆ. ಗ್ರಾಮದ ಎಲ್ಲರೂ ಸಹಕಾರ ನೀಡಿ ಸಮಾರಂಭದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ ಎಂದು ಶತಮಾನೋತ್ಸವ ಸಮಿತಿಯ ಮುಖ್ಯಸ್ಥ ತೇಜಸ್ವಿ ಪಟೇಲ್‌ ತಿಳಿಸಿದ್ದಾರೆ.

ಜನರ ಮತ್ತು ಇಲಾಖೆಯ ಸಂಪೂರ್ಣ ಸಹಕಾರದಿಂದ ಶಾಲೆಯು ಆರಂಭದಿಂದಲೂ ಪ್ರಗತಿ ಹೊಂದುತ್ತಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಅಕ್ಷರದಾನ ಮಾಡಿದೆ. ಈಗ ಶಾಲೆಯಲ್ಲಿ 150 ಮಕ್ಕಳು ಓದುತ್ತಿದ್ದಾರೆ. ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಶಾಲೆಗೆ ಒದಗಿಸಲಾಗಿದೆ. ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮದಲ್ಲಿ ಬೋಧನೆ ಮಾಡಲಾಗುತ್ತಿದೆ. ಶಾಲೆಯಲ್ಲಿ ಕಂಪ್ಯೂಟರ್‌ ಶಿಕ್ಷಣ ನೀಡಲಾಗುತ್ತಿದೆ. 3,000 ಉಪಯುಕ್ತ ಪುಸ್ತಕಗಳನ್ನು ಒಳಗೊಂಡ ಸುಸಜ್ಜಿತ ಗ್ರಂಥಾಲಯ, ರಂಗಮಂದಿರ ಹೊಂದಿದೆ. ಪ್ರತಿ ವಾರ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದರೊಂದಿಗೆ ಮಕ್ಕಳನ್ನು ದೈಹಿಕ ಮತ್ತು ಬೌದ್ಧಿಕವಾಗಿ ತರಬೇತಿ ನೀಡಲು ಶಿಕ್ಷಕರು ಶ್ರಮಿಸುತ್ತಿದ್ದಾರೆ. ಪ್ರತಿ ವರ್ಷ ಪರೀಕ್ಷೆ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿದೆ. ಅಧಿಕಾರಿಗಳ ಮತ್ತು ಶಾಲಾ ಅಭಿವೃದ್ಧಿ ಸಮಿತಿಯ ಮಾರ್ಗದರ್ಶನದಲ್ಲಿ ಶಾಲೆ ಮುನ್ನಡೆಯುತ್ತಿದೆ ಎಂದು ಮುಖ್ಯ ಶಿಕ್ಷಕರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.