ಚನ್ನಗಿರಿ: ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾಗಿದೆ. ಭವಿಷ್ಯದ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳು ಶಿಕ್ಷಕರಾಗಿದ್ದಾರೆ. ಜನಪ್ರತಿನಿಧಿಗಳನ್ನು ಓಲೈಸುವ ಬಹುಪರಾಕ್ ಸಂಸ್ಕೃತಿಯನ್ನು ಶಿಕ್ಷಕರು ಕೈ ಬಿಡಬೇಕು ಎಂದು ಶಾಸಕ ವಡ್ನಾಳ್ ರಾಜಣ್ಣ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಸೋಮವಾರ ನಡೆದ ಪ್ರಾಥಮಿಕ ಶಾಲಾ ಶಿಕ್ಷಕ, ಪ್ರೌಢಶಾಲಾ ಸಹ ಶಿಕ್ಷಕ ಹಾಗೂ ಮುಖ್ಯಶಿಕ್ಷಕರ ಸಂಘದ ಪ್ರಥಮ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನವನ್ನು ಈ ತಾಲ್ಲೂಕು ಪಡೆದಿರುವುದು ಸ್ವಾಗತಾರ್ಹವಾಗಿದೆ. ವಿದ್ಯಾರ್ಥಿಗಳ ಫಲಿತಾಂಶ ಮುಖ್ಯ. ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಉತ್ತಮ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವತ್ತ ಕಾಳಜಿ ವಹಿಸಬೇಕು. ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗಾಗಿ ಶಿಕ್ಷಕರ ಸಲಹೆ, ಮಾರ್ಗದರ್ಶನ ಹಾಗೂ ಸಹಕಾರ ಅಗತ್ಯ. ಶೈಕ್ಷಣಿಕ ಪ್ರಗತಿಗೆ ಶಿಕ್ಷಣ ಇಲಾಖೆಗೆ ಸಂಪೂರ್ಣ ಸಹಕಾರವನ್ನು ನೀಡುತ್ತೇನೆ ಎಂದರು.
ಪ್ರೌಢಶಾಲಾ ಸಹ ಶಿಕ್ಷಕರ ಸಂಘಧ ಅಧ್ಯಕ್ಷ ಸಿದ್ದೇಶಪ್ಪ ಜಿಗಣಪ್ಪರ್, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವೈ.ಗಂಗಾಧರ್, ರಮೇಶ್, ತಾಲ್ಲೂಕು ಪಂಚಾಯ್ತಿ ಸದಸ್ಯ ಶಂಕರ್‌ಪಾಟೀಲ್, ಸಮನ್ವಯಾಧಿಕಾರಿ ರಾಜೀವ್, ವಿವೇಕಾನಂದ ಸ್ವಾಮಿ, ಎಸ್.ಶಂಕರಪ್ಪ ಬಿಸಿಯೂಟ ಸಹಾಯಕ ನಿರ್ದೇಶಕ ಕೆ.ಸೋಮಶೇಖರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಸಕ ವಡ್ನಾಳ್ ರಾಜಣ್ಣ ಅವರನ್ನು ಸನ್ಮಾನಿಸಲಾಯಿತು. ಸಿ.ನಾಗರಾಜ್ ಪ್ರಾರ್ಥಿಸಿದರು. ಬಿಇಒ ಜಿ.ಆರ್.ತಿಪ್ಪೇಶಪ್ಪ ಸ್ವಾಗತಿಸಿದರು. ಕೆ.ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.