ADVERTISEMENT

ಜಿನಿಗಿಹಳ್ಳಕ್ಕೆ 2 ಬ್ಯಾರೇಜ್: ಶಾಸಕ ಎಸ್.ವಿ. ರಾಮಚಂದ್ರ ಮಾಹಿತಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 5:41 IST
Last Updated 5 ಅಕ್ಟೋಬರ್ 2021, 5:41 IST
ಜಗಳೂರು ತಾಲ್ಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಸಮೀಪ ಜಿನಿಗಿಹಳ್ಳಕ್ಕೆ ಬ್ಯಾರೇಜ್ ನಿರ್ಮಾಣಕ್ಕೆ ಶಾಸಕ ಎಸ್.ವಿ. ರಾಮಚಂದ್ರ ಚಾಲನೆ ನೀಡಿದರು.
ಜಗಳೂರು ತಾಲ್ಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಸಮೀಪ ಜಿನಿಗಿಹಳ್ಳಕ್ಕೆ ಬ್ಯಾರೇಜ್ ನಿರ್ಮಾಣಕ್ಕೆ ಶಾಸಕ ಎಸ್.ವಿ. ರಾಮಚಂದ್ರ ಚಾಲನೆ ನೀಡಿದರು.   

ಜಗಳೂರು: ತಾಲ್ಲೂಕಿನ ತೊರೆಸಾಲು ಪ್ರದೇಶದಲ್ಲಿ ಶಾಶ್ವತ ಅಂತರ್ಜಲ ಹೆಚ್ಚಳದ ದೃಷ್ಟಿಯಿಂದ ಜಿನಿಗಿಹಳ್ಳಕ್ಕೆ ಎರಡು ಬೃಹತ್ ಬ್ಯಾರೇಜ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.

ತಾಲ್ಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ವಿಶ್ವೇಶ್ವರಯ್ಯ ಜಲನಿಗಮದಿಂದ ₹ 1.35 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಭಾನುವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ತೊರೆಸಾಲು ಪ್ರದೇಶದ ಪುರಾತನ ಜಿನಿಗಿ ಹಳ್ಳದಲ್ಲಿ ಪ್ರತಿ ಮಳೆಗಾಲದಲ್ಲಿ ಭಾರಿ ಪ್ರಮಾಣದಲ್ಲಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಅಮೂಲ್ಯ ಜಲರಾಶಿಯನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಆಕನೂರು ಮತ್ತು ಕಮಂಡಲಗುಂದಿ ಗ್ರಾಮಗಳ ಸಮೀಪ ಎರಡು ದೊಡ್ಡ ಬ್ಯಾರೇಜ್‌ಗಳನ್ನು ನಿರ್ಮಿಸಲಾಗುವುದು. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ಮುಂದಿನ ದಿನಗಳಲ್ಲೂ ವ್ಯಾಪಕವಾಗಿ ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುವುದು ಎಂದು ಶಾಸಕರು ತಿಳಿಸಿದರು.

ADVERTISEMENT

ಭದ್ರಾ ಮೆಲ್ದಂಡೆ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಕೆಂದ್ರ ಸರ್ಕಾರ ₹ 1,200 ಕೋಟಿ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ನವೆಂಬರ್ 5ರಂದು ಚಾಲನೆ ನೀಡಲಾಗುವುದು. ಭದ್ರಾ ಮೇಲ್ದಂಡೆ ಯೋಜನೆಯಡಿ ತಾಲ್ಲೂಕಿನ 46 ಎಕರೆ ಪ್ರದೇಶಕ್ಕೆ ನೀರಾವರಿ ಕೈಗೊಳ್ಳಲಾಗುವುದು ಎಂದು ಶಾಸಕರು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್. ನಾಗರಾಜ್, ಮುಖಂಡರಾದ ರಘುರಾಮ್ ರೆಡ್ಡಿ, ಇಂದ್ರೇಶ್, ಅರವಿಂದ ಪಾಟೀಲ್, ಎಇಇ ಮಧುಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.