ADVERTISEMENT

ಶಾಲೆ ಮುಚ್ಚುವ ಪ್ರಯತ್ನಕ್ಕೆ ವಿರೋಧ: ಸರ್ಕಾರದ ವಿರುದ್ಧ ಎಐಡಿಎಸ್‌ಒ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2025, 6:39 IST
Last Updated 22 ನವೆಂಬರ್ 2025, 6:39 IST
ದಾವಣಗೆರೆಯ ಜಯದೇವ ವೃತ್ತದಲ್ಲಿ ಎಐಡಿಎಸ್ಓ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ದಾವಣಗೆರೆಯ ಜಯದೇವ ವೃತ್ತದಲ್ಲಿ ಎಐಡಿಎಸ್ಓ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ದಾವಣಗೆರೆ: ರಾಜ್ಯದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಯದೇವ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ತಳ್ಳುತ್ತಿದೆ ಎಂದು ಆರೋಪಿಸಿದರು.

‘ರಾಜ್ಯದ ಸಾವಿರಾರು ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿತ್ತು. ಇದನ್ನು ವಿರೋಧಿಸಿ 50 ಲಕ್ಷ ಸಹಿ ಸಂಗ್ರಹ ಅಭಿಯಾನ ನಡೆಸಿದ ಪರಿಣಾಮ ಸರ್ಕಾರ ಈ ಪ್ರಯತ್ನದಿಂದ ಹಿಂದೆ ಸರಿದಿತ್ತು. ಈಗ ಮತ್ತೆ ಸಾವಿರಾರು ಶಾಲೆಗಳನ್ನು ಮುಚ್ಚಲು ಉತ್ಸುಕತೆ ತೋರಿದೆ. ಇದು ರಾಜ್ಯದ ಜನರಿಗೆ ಬಗೆದ ನಂಬಿಕೆ ದ್ರೋಹ’ ಎಂದು ಎಐಡಿಎಸ್ಓ ಜಿಲ್ಲಾ ಘಟಕದ ಅಧ್ಯಕ್ಷೆ ಪೂಜಾ ನಂದಿಹಳ್ಳಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಕರ್ನಾಟಕ ಪಬ್ಲಿಕ್ ಶಾಲೆಯ ಹೆಸರಿನಲ್ಲಿ ಗ್ರಾಮೀಣ ಪ್ರದೇಶದ ಶಾಲೆಗಳನ್ನು ವಿಲೀನಗೊಳಿಸಲು ಮುಂದಾಗಿದೆ. ಗ್ರಾಮ ಪಂಚಾಯಿತಿಗೆ ಒಂದು ಶಾಲೆಯನ್ನು ಮಾತ್ರ ಉಳಿಸಿಕೊಳ್ಳುತ್ತಿದೆ. ಕುಸಿಯುತ್ತಿರುವ ದಾಖಲಾತಿ ನೆ‍ಪವಾಗಿಟ್ಟುಕೊಂಡು ಜನ ವಿರೋಧಿ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ದೂರಿದರು.

ಎಐಡಿಎಸ್‌ಪ ಜಿಲ್ಲಾ ಘಟಕದ ಕಾರ್ಯದರ್ಶಿ ಸುಮನ್ ಟಿ.ಎಸ್., ಎಚ್‌.ಡಿ. ಗಂಗಾಧರ್, ಮುಖಂಡರಾದ ಪ್ರಿಯಾಂಕಾ, ಸಿದ್ದಿಕ್ ಅವರಗೆರೆ, ವಿಕಾಸ್ ಎಂ.ಆರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.